ADVERTISEMENT

ಪ್ಲಾಸ್ಟಿಕ್‌ ಮುಕ್ತ ಜೀವನಕ್ಕೆ ಪ್ರತಿಜ್ಞೆ ಮಾಡಿ

ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಪಿ.ಎಂ.ನರೇಂದ್ರ ಸ್ವಾಮಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 3:02 IST
Last Updated 29 ಅಕ್ಟೋಬರ್ 2025, 3:02 IST
ಹಾಸನದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು, ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು 
ಹಾಸನದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು, ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು    

ಹಾಸನ: ‘ಹಾಸನ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಆಗುತ್ತಿರುವ ಗುಡ್ಡ ಕುಸಿತ ಮಾನವನ ಅತಿಯಾಸೆಗೆ ನಿದರ್ಶನ. ಉತ್ತಮ ಜಲ ಕಾಪಾಡಿಕೊಳ್ಳುವುದು ಮಾತ್ರವಲ್ಲದೇ ಉತ್ತಮ ಪರಿಸರ ನಿರ್ಮಾಣ ಕೂಡ ನಮ್ಮ ಹೊಣೆ. ಈ ಕೆಲಸಕ್ಕೆ ಎಲ್ಲರೂ ಕೈಗೂಡಿಸಬೇಕು. ಇಂದಿನಿಂದಲೇ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು. ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರತಿಜ್ಞೆ ಮಾಡಬೇಕು’ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದರು.

ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲಾಡಳಿತಗಳ ಆಶ್ರಯದಲ್ಲಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

‘ವರ್ಷದಿಂದ ವರ್ಷಕ್ಕೆ ನದಿಗಳು ಕಲುಷಿತಗೊಳ್ಳುತ್ತಿವೆ. ಇದರಿಂದ ಜನ ಜೀವನದ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ನದಿಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಆಗಬೇಕು. ಕಾರ್ಖಾನೆಗಳು ಮತ್ತು ಕಾಫಿ ಪಲ್ಪರ್ ಘಟಕಗಳ ಕಲುಷಿತ ನೀರು ಹಾಗೂ ಇನ್ನಿತರ ತ್ಯಾಜ್ಯಗಳು ಭೂಮಿ ಮತ್ತು ನದಿಗಳನ್ನು ಸೇರುತ್ತಿರುವುದು ಅಪಾಯಕಾರಿ’ ಎಂದು ಹೇಳಿದರು.

ADVERTISEMENT

‘ಮಾಲಿನ್ಯ ನಿಯಂತ್ರಣ ಮಂಡಳಿಯು, ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಕಾನೂನು ಜಾರಿಗೊಳಿಸುವುದು, ಪರಿಸರ ಗುಣಮಟ್ಟದ ಮೇಲ್ವಿಚಾರಣೆ, ಮಾಲಿನ್ಯ ಘಟನೆಗಳಿಗೆ ಪ್ರತಿಕ್ರಿಯಿಸುವುದು, ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡುತ್ತಿದೆ’ ಎಂದು ಹೇಳಿದರು.

‘ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ, 1974ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿ, ಮಾಲಿನ್ಯ ನಿಯಂತ್ರಣಕ್ಕೆ ಮುನ್ನುಡಿ ಬರೆದರು. ಈಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷ ಪೂರೈಸಿದ್ದು, ರಾಜ್ಯದಾದ್ಯಂತ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವುದು ಸುವರ್ಣ ಮಹೋತ್ಸವದ ಗುರಿಯಾಗಿದೆ’ ಎಂದು ತಿಳಿಸಿದರು.

ಇಂದಿರಾ ಗಾಂಧಿ ಅವರು ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯ್ದೆಗಳನ್ನು ಜಾರಿಗೆ ತಂದರು. 1972ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು ಎಂದು ವಿವರಿಸಿದರು.

‘ರಾಜ್ಯದ 15 ಕಡೆ ಸುವರ್ಣ ಮಹೋತ್ಸವದ ಬೃಹತ್ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಒಳಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೇ ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹತ್ತು-ಹಲವು ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶಗಳಿಂದ ಹಿಡಿದು, ತಾಲ್ಲೂಕು, ಜಿಲ್ಲೆ ಸೇರಿದಂತೆ ರಾಜ್ಯ ಮಟ್ಟದವರೆಗೆ ಏಕ ಕಾಲಕ್ಕೆ ದೊಡ್ಡ ಪ್ರಮಾಣದಲ್ಲಿ ಪರಿಸರ ಜಾಗೃತಿ ಮೂಡಿಸುವ ಹಾಗೂ ಮಾಲಿನ್ಯ ನಿಯಂತ್ರಣ ಮಾಡಬೇಕಾದ ಅಗತ್ಯದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ’ ಎಂದು ನರೇಂದ್ರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಈ ನಿಟ್ಟಿನಲ್ಲಿ ನಾಗರಿಕರ ಪ್ರಜ್ಞೆ ಇಲ್ಲದಿದ್ದರೆ ಪರಿಸರ ಉಳಿಯಲು ಸಾಧ್ಯವಿಲ್ಲ. ಸುಂದರ ಪರಿಸರ ವಸುಂಧರೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಕೈಯಲ್ಲಿದೆ ಎಂದರು.

ವಿದ್ಯಾರ್ಥಿಗಳಿಗೆ ಕೆಲ ಪ್ರಶ್ನೆಗಳನ್ನು ಕೇಳುವ ಮೂಲಕ ಹುರಿದುಂಬಿಸಿ, ಪರಿಸರ ಜಾಗೃತಿ ಕುರಿತು ಮುಂದಿನ ದಿನಗಳಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸುವ ಕುರಿತು ಹೇಳಿದರು.

ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ. ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಸಕಲೇಶಪುರ ತಾಲ್ಲೂಕು ಘಟಕದ ಅಧ್ಯಕ್ಷ ಮುರುಳಿ ಮೋಹನ್‌, ಎಚ್.ಪಿ. ಶಿವಣ್ಣ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಮುನಿರಾಜ್, ಸಾಹಿದ್, ರಾಜಶೇಖರ್, ವಿಜಯಕುಮಾರ್ ಇದ್ದರು.

ಕಲಾವಿದ ಬಿ.ಟಿ.ಮಾನವ, ಚನ್ನಬಸವೇಶ್ವರ, ಕುಮಾರಸ್ವಾಮಿ, ಚಿಕ್ಕಮಗಳೂರು ಜಿಲ್ಲೆಯ ಸ್ವಚ್ಛ ಟ್ರಸ್ಟ್ , ಸ್ಕೌಟ್ ಮತ್ತು ಗೈಡ್ಸ್, ಪೌರ ಕಾರ್ಮಿಕರಾದ ಬಿ.ಆರ್.ಸಂತೋಷ್‌, ಗೌರಮ್ಮ, ಎ.ಸಿ. ನಾಗರಾಜ್, ಚಿಕ್ಕಮಗಳೂರು ಜಿಲ್ಲೆಯ ಕೃಷ್ಣಕುಮಾರ್, ಗೋವಿಂದ್ ರಾಜ್, ಸೋಮಶೇಖರ್ ಹಾಗೂ ಪರಿಸರ ಕುರಿತು ರೀಲ್ಸ್ ಮಾಡಿ ವಿಜೇತರಾದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಹಿರಿಯ ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಸ್ವಾಗತಿಸಿದರು. ಪರಿಸರ ಅಧಿಕಾರಿ ಆರ್. ಭಾಸ್ಕರ್ ಸಂವಿಧಾನ ಪೀಠಿಕೆ ಬೋಧಿಸಿದರು.

ಹಾಸನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆದ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದ್ದ ಹಾಸನ ಹಾಗೂ ಚಿಕ್ಕಮಗಳೂರಿನ ವಿದ್ಯಾರ್ಥಿಗಳು.

ರೀಲ್ಸ್‌ ಮಾಡಿ ಬಹುಮಾನ ಗೆಲ್ಲಿ

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಮಾಡುವುದರಲ್ಲಿ ಯುವಕರ ಪಾತ್ರ ಬಹಳ ಮಹತ್ವದ್ದು ಎಂದು ಪರಿಗಣಿಸಿ ‘ಪರಿಸರದ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ’ ಎಂಬ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದು ನರೇಂದ್ರ ಸ್ವಾಮಿ ಹೇಳಿದರು. ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪರಿಸರ ಕಾಳಜಿ ಸಂರಕ್ಷಣೆಯ ಸಂದೇಶ ಸಾರುವ ಉತ್ತಮ ರೀಲ್ಸ್‌ಗೆ ₹ 50 ಸಾವಿರ ಪ್ರಥಮ ಬಹುಮಾನ ₹ 25 ಸಾವಿರ ದ್ವಿತೀಯ ಹಾಗೂ ₹ 10 ಸಾವಿರ ತೃತೀಯ ಬಹುಮಾನ ನೀಡಲಾಗುವುದು ಎಂದು ವಿವರಿಸಿದರು. ಜಿಲ್ಲಾ ಮಟ್ಟದಲ್ಲಿ ಪರಿಸರ ಉಳಿವು ಹಾಗೂ ಮಾಲಿನ್ಯ ನಿಯಂತ್ರಣಕ್ಕಾಗಿ ಎಲೆ ಮರೆಯ ಕಾಯಿಗಳಂತೆ ಕೆಲಸ ಮಾಡುತ್ತಿರುವ ವ್ಯಕ್ತಿ ಮತ್ತು ಸಂಘ ಸಂಸ್ಥೆಗಳನ್ನು ಗುರುತಿಸಿ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಲಾಗುವುದು. ಜಿಲ್ಲಾಧಿಕಾರಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ ಎಂದರು.

ವಿಧಾನಸೌಧದಲ್ಲೂ ಪ್ಲಾಸ್ಟಿಕ್‌ ಬಳಕೆ ನಿರ್ಬಂಧಿಸಿ

ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲೂ ಕುಡಿಯುವ ನೀರಿಗಾಗಿ ಪ್ಲಾಸ್ಟಿಕ್ ಬಾಟಲಿ ಬಳಕೆ ಹೆಚ್ಚಿದೆ. ಇಲ್ಲಿಯೂ ಗಾಜಿನ ಬಾಟಲಿಗಳನ್ನು ಬಳಸಲು ಮುಂದಾಗಬೇಕು ಎಂದು ಶಾಸಕ ಸಿಮೆಂಟ್ ಮಂಜು ಸಲಹೆ ನೀಡಿದರು. ಎಲ್ಲ ಸರ್ಕಾರಿ ಕಚೇರಿ ಸಂಘ ಸಂಸ್ಥೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಬೇಕು. ಈ ಮೂಲಕ ಎಲ್ಲರೂ ಒಟ್ಟಾಗಿ ಪರಿಸರ ಬೆಳೆಸುವ ಮೂಲಕ ಮುಂದಿನ ಸಮಾಜಕ್ಕೆ ಉತ್ತಮ ಪರಿಸರ ಉಳಿಸೋಣ ಎಂದರು. ಪರಿಸರ ಹೇಗೆ ಇಟ್ಟುಕೊಳ್ಳಬೇಕು ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನೆರೆಯ ಚಿಕ್ಕಮಗಳೂರು ಜಿಲ್ಲೆಯಿಂದಲೂ ಸಾಕಷ್ಟು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಎಲ್ಲರಿಗೂ ಪರಿಸರ ಜಾಗೃತಿಯೇ ಮುಖ್ಯವಾಗಬೇಕು. ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಪರಿಸರ ಉಳಿಸುವ ಕೆಲಸ ಸುಲಭವಾಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.