ADVERTISEMENT

ರಾಜ್ಯಗಳಿಗೆ ಸಮರ್ಪಕ ತೆರಿಗೆ ಪಾಲು ನೀಡಿ: ಕೃಷ್ಣ ಬೈರೇಗೌಡ

ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಕೃಷ್ಣ ಬೈರೇಗೌಡ: ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 8:09 IST
Last Updated 27 ಜನವರಿ 2026, 8:09 IST
ವಿವಿಧ ಕ್ಷೇತ್ರಗಳ ಸಾಧಕರನ್ನು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದಲ್ಲಿ ಸನ್ಮಾನಿಸಲಾಯಿತು 
ವಿವಿಧ ಕ್ಷೇತ್ರಗಳ ಸಾಧಕರನ್ನು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದಲ್ಲಿ ಸನ್ಮಾನಿಸಲಾಯಿತು    

ಹಾಸನ: ‘ಎಲ್ಲರೊಂದಿಗೆ ಒಂದಾಗಿ ಬದುಕುವ ರೂಢಿ ಮಾಡಿಕೊಂಡರೆ ಮಾತ್ರ ಸಂವಿಧಾನಕ್ಕೆ ನಿಜವಾದ ಬೆಲೆ ಕೊಟ್ಟಂತಾಗುತ್ತದೆ. ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಗೌರವ ನೀಡಿ, ರಾಜ್ಯಗಗಳ ತೆರಿಗೆ ಪಾಲನ್ನು ಸಮರ್ಪಕವಾಗಿ ನೀಡುವ ಮೂಲಕ ರಾಜ್ಯಗಳ ಆರ್ಥಿಕ ಪ್ರಗತಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ನಗರದ ಜಿಲ್ಲಾ ಹಾಕಿ ಕ್ರೀಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನವು ಕೂಡಿ ಬದುಕುವ ಸಂದೇಶ ನೀಡಿದ್ದರೂ, ಅದನ್ನು ಇಂದಿನ ದಿನಗಳಲ್ಲಿ ಬಹುತೇಕ ಪಾಲಿಸಲಾಗುತ್ತಿಲ್ಲ. ಸಂವಿಧಾನ ಯಶಸ್ವಿ ಆಗಬೇಕಾದರೆ ಎಲ್ಲರೂ ಅದರ ರಕ್ಷಣೆಗೆ ನಿಲ್ಲಬೇಕು ಎಂದರು.

ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಹಲವು ರಾಜ್ಯಗಳಲ್ಲಿ ಜಿಎಸ್‌ಟಿ ಬೆಳವಣಿಗೆ ನಕಾರಾತ್ಮಕವಾಗಿದ್ದರೂ, ಕರ್ನಾಟಕದಲ್ಲಿ ಸಕಾರಾತ್ಮಕವಾಗಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಭದ್ರತೆ ಒದಗಿಸಿವೆ ಎಂದು ತಿಳಿಸಿದರು.

ADVERTISEMENT

ಕೇಂದ್ರ ಹಣಕಾಸು ಸಚಿವರ ವಿರುದ್ಧ ಮುಖ್ಯಮಂತ್ರಿ ಮಾತನಾಡಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ರಾಜ್ಯದ ಜನರಿಂದ ಆಯ್ಕೆಯಾದ ಸರ್ಕಾರಕ್ಕೆ ರಾಜ್ಯದ ಹಿತಕ್ಕಾಗಿ ಮಾತನಾಡುವ ಜವಾಬ್ದಾರಿ ಇದೆ. ಉದಾರತೆ ತೋರಿಸಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಳಿತು ಮಾಡಬೇಕು ಎಂದು ಹೇಳಿದರು.

ಮೇಕೆದಾಟು ವಿಷಯದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ಪರವಾಗಿ ತೀರ್ಪು ಬಂದಿದೆ. ಆದರೆ ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಲು ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಹೆಸರಿನಲ್ಲಿ ಕಿತ್ತು ಹಾಕುವ ಬದಲು, ಹಳೆಯ ಕಾಯ್ದೆಯನ್ನೇ ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಇದಕ್ಕೂ ಮೊದಲು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾ ಪೊಲೀಸ್, ಎನ್‌ಸಿಸಿ, ಗೃಹರಕ್ಷಕದಳ ಹಾಗೂ ವಿವಿಧ ಶಾಲಾ–ಕಾಲೇಜು ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಎಸ್ಪಿ ಶುಭನ್ವಿತಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್‌ ಗಂಗಣ್ಣವರ್‌ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.