ADVERTISEMENT

‘ಜನಸ್ಪಂದನಾ ಸಭೆಗೆ ಅನುಮತಿ ಕೊಡಿ’

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆಗೆ’ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 3:23 IST
Last Updated 20 ಮಾರ್ಚ್ 2022, 3:23 IST
ಅರಸೀಕೆರೆ ತಾಲ್ಲೂಕಿನ ರಂಗಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರ ಅಹವಾಲು ಆಲಿಸಲಾಯಿತು. ಸಂತೋಷ್ ಕುಮಾರ್, ಜಿ.ವಿ.ಟಿ. ಬಸವರಾಜ್, ಕಾಂತರಾಜ್, ಜಗದೀಶ್, ನಟರಾಜ್, ಕೆ.ಎಂ.ಶಿವಲಿಂಗೇಗೌಡ, ಆರ್. ಗಿರೀಶ್ ಇದ್ದರು
ಅರಸೀಕೆರೆ ತಾಲ್ಲೂಕಿನ ರಂಗಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರ ಅಹವಾಲು ಆಲಿಸಲಾಯಿತು. ಸಂತೋಷ್ ಕುಮಾರ್, ಜಿ.ವಿ.ಟಿ. ಬಸವರಾಜ್, ಕಾಂತರಾಜ್, ಜಗದೀಶ್, ನಟರಾಜ್, ಕೆ.ಎಂ.ಶಿವಲಿಂಗೇಗೌಡ, ಆರ್. ಗಿರೀಶ್ ಇದ್ದರು   

ಅರಸೀಕೆರೆ: ‘ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ತಾಲ್ಲೂಕು ಮಟ್ಟದ ಜನಸ್ಪಂದನಾ ಸಭೆ ನಡೆಸಲು ಸರ್ಕಾರ ಅನುಮತಿ ನೀಡಬೇಕು’ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಆಗ್ರಹಿಸಿದರು.

ತಾಲ್ಲೂಕಿನ ಗಂಡಸಿ ಹೋಬಳಿಯ ರಂಗಾಪುರ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆಗೆ’ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

‘ತಾಲ್ಲೂಕಿನಲ್ಲಿ ರೈತರ ಪಂಪ್‌ಸೆಟ್‌ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್‌ ಸಂಪರ್ಕ ಪಡೆದ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು. ಪ್ರತಿದಿನ 7 ಗಂಟೆಗಳ 3 ಫೇಸ್‌ ವಿದ್ಯುತ್ ನೀಡಬೇಕು. ಫಸಲ್ ಬಿಮಾ ಯೋಜನೆಯಡಿ ಪ್ರತಿ ಬೆಳೆಗೆ ವಿಮೆ ಮಾಡಿಸಲು ಕಡ್ಡಾಯಗೊಳಿಸಬೇಕು. ಆಧಾರ್ ಕಾರ್ಡ್ ಪಡೆಯಲು ಇರುವ ಅಡೆತಡೆಗಳನ್ನು ನಿವಾರಿಸಬೇಕು’ ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ‘ಕಳೆದ ವಾರ ಆರಂಭಿಸಿದ ಕಂದಾಯ ದಾಖಲೆ ಮನೆ ಬಾಗಿಲಿಗೆ ಅಭಿಯಾನದಡಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚು ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗಿದೆ’ ಎಂದರು.

ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿ.ವಿ.ಟಿ. ಬಸವರಾಜ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜ್ ಮಾತನಾಡಿದರು.

ತಹಶೀಲ್ದಾರ್ ಸಂತೋಷ್ ಕುಮಾರ್, ಕೃಷಿ ಇಲಾಖೆ ಜಿಲ್ಲಾ ಉಪನಿರ್ದೇಶಕ ಭಾನುಪ್ರಕಾಶ್, ತಾಲ್ಲೂಕು ಪಂಚಾಯಿತಿ ಇಒ ನಟರಾಜ್, ಉಪ ವಿಭಾಗಾಧಿಕಾರಿ ಜಗದೀಶ್, ತೋಟಗಾರಿಕೆ ಜಿಲ್ಲಾ ನಿರ್ದೇಶಕ ಯೋಗೀಶ್, ರಂಗಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಮಲ್ಲೇಶ್, ಉಪಾಧ್ಯಕ್ಷ ರಮೇಶ್, ಜಿಲ್ಲಾ ವಿಶೇಷ ಭೂ ದಾಖಲೆಗಳ ಇಲಾಖೆ ಅಧಿಕಾರಿ ಸುಮಲತಾ, ಗ್ರೇಡ್– 2 ತಹಶೀಲ್ದಾರ್ ಫಾಲಾಕ್ಷಮೂರ್ತಿ ಇದ್ದರು.

ರಸ್ತೆ, ವಸತಿ ಸೌಲಭ್ಯಕ್ಕೆ ಆಗ್ರಹ

‘ರಂಗಾಪುರದಲ್ಲಿ ದೇವಸ್ಥಾನಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ರಂಗಾಪುರ, ಮೇಗಳಹಟ್ಟಿ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಬೇಕು. ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಬೇಕು’ ಎಂದು ಗ್ರಾಮಸ್ಥರು ಮನವಿ ಮಾಡಿದರು.

‘ದೇವಾಲಯಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ನಿವೇಶನ ರಹಿತರಿಗೆ ತಕ್ಷಣ ನಿವೇಶನ ಹಂಚಿಕೆ ಮಾಡಿ, ವಸತಿ ಯೋಜನೆಯಡಿ ಮನೆ ನಿರ್ಮಿಸಬೇಕು’ ಎಂದು ಜಿಲ್ಲಾಧಿಕಾರಿ ಗಿರೀಶ್ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.