
ಹಾಸನ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ನಿಟ್ಟೂರು ಗ್ರಾಮ ಪಂಚಾಯಿತಿಗೆ ವಿಲೀನಗೊಳಿಸಲು ಹೊರಟಿರುವ ಯಲಗುಂದ ಸರ್ಕಾರಿ ಶಾಲೆಯನ್ನು ಉಳಿಸಲು ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು ಶನಿವಾರ ಪ್ರತಿಭಟನೆ ಮಾಡಿದರು.
ಎಐಡಿಎಸ್‌ಒ ಜಿಲ್ಲಾ ಘಟಕದ ಅಧ್ಯಕ್ಷೆ ಚೈತ್ರಾ ಮಾತನಾಡಿ, ಒಂದು ಬಾರಿ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆ ಮುಚ್ಚಿದರೆ, ಎಷ್ಟೇ ಪ್ರಯತ್ನಪಟ್ಟರು ಮತ್ತೆ ಶಾಲೆ ತೆರೆಯಲು ಸಾಧ್ಯವಿಲ್ಲ. ಒಂದೇ ಒಂದು ಮಗು ಇದ್ದರೂ, ಆ ಮಗುವಿಗೆ ಶಾಲೆ ಇರಬೇಕು. ಒಬ್ಬ ಶಿಕ್ಷಕರನ್ನು ನೇಮಕ ಮಾಡಬೇಕು. ಒಂದೇ ಒಂದು ಮಗು ಇದ್ದರೂ ಶಾಲೆ ಮುಚ್ಚಲ್ಲ ಎಂಬ ಹೇಳಿಕೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತಮ್ಮ ಮಾತನ್ನು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಘಟಕದ ಕಾರ್ಯದರ್ಶಿ ಸುಷ್ಮಾ ಮಾತನಾಡಿ, ಈಗಾಗಲೇ ರಾಜ್ಯದಾದ್ಯಂತ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಪೋಷಕರ ಪ್ರತಿಭಟನೆಗಳು ನಡೆಯುತ್ತಿವೆ. ಈ ಯೋಜನೆ ಅಡಿಯಲ್ಲಿ 40ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ನಡೆ ಖಂಡನೀಯ ಎಂದರು.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಇಲ್ಲ ಎಂದು ಸರ್ಕಾರ ಹೇಳುತ್ತಿರುವುದು ಶುದ್ಧ ಸುಳ್ಳು. ರಾಜ್ಯದಲ್ಲಿ 37 ಲಕ್ಷ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಆದರೆ ಸರ್ಕಾರದ ನಿರ್ಲಕ್ಷದಿಂದ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ. ರಾಜ್ಯದಲ್ಲಿ 21 ಸಾವಿರ ಸರ್ಕಾರಿ ಶಾಲಾ ಕಟ್ಟಡಗಳು ಹಲವು ವರ್ಷಗಳಿಂದ ದುರಸ್ತಿ ಕಂಡಿಲ್ಲ. 60ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆ ಖಾಲಿ ಇವೆ. ಈ ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚಲು ಹೊರಟಿದೆ. ಕರ್ನಾಟಕದ ಜನತೆ ಈ ನೀತಿ ವಿರುದ್ಧ ಗಟ್ಟಿಯಾಗಿ ಹೋರಾಟ ಮಾಡಬೇಕಿದೆ ಹಾಗೂ ಹಾಗೂ ಈ ಊರಿನ ಸರ್ಕಾರಿ ಶಾಲೆ ಉಳಿಸಲು ಊರಿನ ಗ್ರಾಮಸ್ಥರು ಮುಂದಾಗಬೇಕು ಎಂದರು .
ಯಲಗುಂದ ಸರ್ಕಾರಿ ಶಾಲೆ ಉಳಿಸಿ ಸಮಿತಿ ರಚಿಸಲಾಯಿತು. ವಿದ್ಯಾರ್ಥಿಗಳು, ಗ್ರಾಮಸ್ಥರಾದ ಆಶಿಕ್, ಬಸವರಾಜು, ಚಂದ್ರಶೇಖರ್, ದಿನೇಶ್, ಜಗದೀಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.