ಬೇಲೂರು: ‘ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರೂ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದು, ಪೋಷಕರು ಸರ್ಕಾರಿ ಶಾಲೆಗಳ ಬಗ್ಗೆ ಅಲಸ್ಯ ಮಾಡಬಾರದು’ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಇಲ್ಲಿನ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಹೊಸ ಕೊಠಡಿಗಳನ್ನು ಗುರುವಾರ ಉದ್ಘಾಟಿಸಿ ಮಾತನಾಡಿ,‘ಈ ಸಾಲಿನಿಂದ ಪೇಟೆ ಹಿರಿಯ ಪ್ರಾಥಮಿಕ ಶಾಲೆಯನ್ನು ಹಳೆ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಿ ತರಗತಿಗಳನ್ನು ಪ್ರಾರಂಭಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಸೂಚಿಸಿದ್ದೇನೆ’ ಎಂದು ತಿಳಿಸಿದರು.
‘ಸಾಕಷ್ಟು ಜನರು ಕಷ್ಟದಿಂದ ಬದುಕು ಸಾಗಿಸುತ್ತಿದ್ದರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಉದ್ದೇಶದಿಂದ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಶಾಲೆಗಳ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಿ ಉತ್ತಮ ಬೋಧನೆ ಮಾಡಬೇಕು’ ಎಂದರು.
‘ತಾಲ್ಲೂಕಿನ 16 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ದಾಖಲಾತಿ ಪ್ರಾರಂಭಿಸಲಾಗುತ್ತಿದ್ದು ಪೋಷಕರು ಇದರ ಸದುಪಯೋಗಪಡಿಸಿಕೊಳ್ಳಬೇಕು’ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ‘ನಮ್ಮ ಶಾಲೆ ಮತ್ತು ನಮ್ಮ ಜವಾಬ್ದಾರಿ’ ಕಾರ್ಯಕ್ರಮ ರೂಪಿಸಿದ್ದು, ದಾಖಲಾತಿ ಆಂದೋಲನವನ್ನು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುವುದು. ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಅನೇಕ ಕಾರ್ಯಕ್ರಮಗಳನ್ನು ಯೋಜಿಸಿದ್ದು, ಇವುಗಳನ್ನು ಅನುಷ್ಠಾನಗೊಳಿಸಲು ಎಸ್‌ಡಿಎಮ್‌ಸಿ, ಹಳೆ ವಿದ್ಯಾರ್ಥಿಗಳ ಸಂಘ, ಹಾಗೂ ಶಿಕ್ಷಣಾಸಕ್ತರ ಸಹಕಾರ ಅಗತ್ಯ’ ಎಂದರು.
ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಬಲರಾಮ್, ಮಹೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಧನಂಜಯ್, ಉಪ ಪ್ರಾಂಶುಪಾಲ ಚಂದ್ರಶೇಖರಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಹೇಮಂತ್ ಕುಮಾರ್, ಶಿಕ್ಷಣ ಸಂಯೋಜಕರಾದ ಗೋಪಾಲ್, ಶಿವಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.