ADVERTISEMENT

ಗ್ರಾಮೀಣ ಪ್ರದೇಶಕ್ಕೆ ಹೆಚ್ಚುವರಿ ಬಸ್

ಖಾಸಗಿ ಮ್ಯಾಕ್ಸಿ ಕ್ಯಾಬ್‍ಗಳ ಅನಧಿಕೃತ ಸಂಚಾರ ನಿಯಂತ್ರಿಸಿ: ಡಿಸಿ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 17 ಮೇ 2019, 14:44 IST
Last Updated 17 ಮೇ 2019, 14:44 IST
ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕಾ ಅವರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಸಿದರು.
ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕಾ ಅವರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಸಿದರು.   

ಹಾಸನ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಸಾರಿಗೆ ಬಸ್ ವ್ಯವಸ್ಥೆ ಒದಗಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಶಾಲಾ, ಕಾಲೇಜು ಮಕ್ಕಳಿಗೆ ಹಾಗೂ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಅನುಕೂಲಕ್ಕೆ ಪೂರಕವಾಗಿ ಬಸ್‍ ಒದಗಿಸಬೇಕು ಎಂದು ತಿಳಿಸಿದರು.

ಲಾರಿ ಮಾಲೀಕರು ಹಾಗೂ ಆಟೊ ಚಾಲಕರ ಕೋರಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೇ, ಖಾಸಗಿ ಮ್ಯಾಕ್ಸಿ ಕ್ಯಾಬ್‍ಗಳ ಅನಧಿಕೃತ ಓಡಾಟದ ಬಗ್ಗೆ ಕ್ರಮ ಕೈಗೊಳ್ಳುವಂತೆಯೂ ನಿರ್ದೇಶನ ನೀಡಿದರು.

ADVERTISEMENT

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ 500 ಮೀಟರ್ ಸುತ್ತ ಯಾವುದೇ ಖಾಸಗಿ ಸಾರಿಗೆ ವಾಹನಗಳ ನಿಲುಗಡೆಗೆ ಅವಕಾಶ ನೀಡಬಾರದು. ಆಟೊಗಳಲ್ಲಿ ಕಡ್ಡಾಯವಾಗಿ ಮೀಟರ್ ಅಳವಡಿಕೆ ಹಾಗೂ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಿಂದ ಪ್ರೀಪೇಡ್ ಆಟೊ ಸೇವೆ ಪ್ರಾರಂಭಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳ ಸಹಕಾರ ಪಡೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್ ಮಾತನಾಡಿ, ಖಾಸಗಿ ವಾಹನಗಳು ಹಾಗೂ ಆಟೊ ಚಾಲಕರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಹಾಗೂ ಸುಲಿಗೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಅದೇ ರೀತಿ ಬಸ್ ನಿಲ್ದಾಣದ ಬಳಿ ಖಾಸಗಿ ವ್ಯಾನ್‍ಗಳಿಂದ ಆಗುತ್ತಿರುವ ಸಾರಿಗೆ ಸಂಚಾರ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಕ್ರಮವಹಿಸಲಾಗುವುದು ಎಂದು ವಿವರಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಎಂ.ಎಲ್ ವೈಶಾಲಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಅಶೋಕ್ ಕುಮಾರ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ (ಪ್ರಭಾರ) ಕಮಲ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಾಯಣ್ಣಗೌಡ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ವಿ.ಎಸ್. ಹೆಗ್ಗಡೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.