ಹಾಸನ: ‘ಹಾಸನಾಂಬ ದರ್ಶನೋತ್ಸವಕ್ಕೆ ಪ್ರತಿ ವರ್ಷ ಭಕ್ತರ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ ಬಾರಿ 20 ಲಕ್ಷಕ್ಕೂ ಹೆಚ್ಚು ಮಂದಿ ದೇವಿಯ ದರ್ಶನ ಪಡೆದಿದ್ದಾರೆ. ಈ ಬಾರಿ 25 ಲಕ್ಷಕ್ಕೂ ಹೆಚ್ಚು ಮಂದಿ ಬರುವ ನಿರೀಕ್ಷೆ ಇದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅ. 15ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಚಿವರು ದೇವಿಯ ದರ್ಶನಕ್ಕೆ ಬರಲಿದ್ದಾರೆ’ ಎಂದರು.
‘ದೇವಿ ದರ್ಶನಕ್ಕೆ 80 ವರ್ಷಕ್ಕಿಂತ ಮೇಲಿನವರು ಹಾಗೂ ಅಂಗವಿಕಲರಿಗೆ ನೇರದರ್ಶನ ವ್ಯವಸ್ಥೆ ಮಾಡಲಾಗಿದೆ. ಗಂಟೆಗೆ 6 ಸಾವಿರ ಮಂದಿಯಂತೆ ಪ್ರತಿದಿನ ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆಯಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್ ರದ್ದುಪಡಿಸಿದ್ದು, ಶಿಷ್ಟಾಚಾರ ದರ್ಶನ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದೆ’ ಎಂದರು.
ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಇದೇ ಮೊದಲ ಬಾರಿಗೆ ಜಾನಪದ ಜಾತ್ರಾ ಮಹೋತ್ಸವ, ವಸ್ತು ಪ್ರದರ್ಶನ, ಶ್ವಾನ ಪ್ರದರ್ಶನ, ಆಹಾರ ಮೇಳ ಏರ್ಪಡಿಸಲಾಗಿದೆ. ಇದರೊಂದಿಗೆ ಫಲಪುಷ್ಪ ಪ್ರದರ್ಶನ, ಪ್ರವಾಸೋದ್ಯಮ ಇಲಾಖೆಯಿಂದ ಟೂರ್ ಪ್ಯಾಕೇಜ್, ಹೆಲಿ ಟೂರಿಸಂ ಕೂಡ ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಾರಿಗೆ ಇಲಾಖೆಯಿಂದ ವಿವಿಧ ಜಿಲ್ಲೆ ಹಾಗೂ ರಾಜಧಾನಿಯಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 2,300ಕ್ಕೂ ಹೆಚ್ಚು ಬಸ್‌ಗಳನ್ನು ದರ್ಶನೋತ್ಸವಕ್ಕೆ ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಸಿಇಒ ಪೂರ್ಣಿಮಾ, ಎಸ್ಪಿ ಮೊಹಮ್ಮದ್ ಸುಜೀತಾ, ಉಪ ವಿಭಾಗಾಧಿಕಾರಿ ಮಾರುತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.