
ಹಾಸನ: ಹಾಸನಾಂಬ ದೇವಿ ದರ್ಶನ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ಅಡಚರಣೆ ಆಗದಂತೆ ಅಗತ್ಯ ಸಿದ್ಧತೆಗೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ವರ್ಷ ಅಕ್ಟೋಬರ್ 26ರಂದು ಹಾಸನಾಂಬ ದೇವಸ್ಥಾನದ ಬಾಗಿಲು ತೆರೆಯಲಿದ್ದು, ನ.11 ರಂದು ಬಾಗಿಲು ಮುಚ್ಚಲಾಗುತ್ತದೆ. ಈ ವರ್ಷ ದರ್ಶನಕ್ಕೆ 30 ಲಕ್ಷಕ್ಕೂ ಹೆಚ್ಚಿನ ಭಕ್ತಾದಿಗಳು ಬರುವ ನಿರೀಕ್ಷೆಯಿದ್ದು, ಅಧಿಕಾರಿಗಳು ತಮಗೆ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಎಲ್ಲ ಭಾಗದಲ್ಲಿಯೂ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಯಾವುದೇ ಸಣ್ಣಪುಟ್ಟ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೇ ಸಮಿತಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ದೇವಸ್ಥಾನದ ಹೊರ ಹಾಗೂ ಒಳಭಾಗಕ್ಕೆ ಪ್ರತ್ಯೇಕ ಸ್ವಚ್ಛತಾ ಸಿಬ್ಬಂದಿ ನೇಮಕ ಮಾಡಬೇಕು. ಶೌಚಾಲಯಗಳ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶೌಚಾಲಯದ ಮುಂಭಾಗದಲ್ಲಿ ಹ್ಯಾಂಡ್ ವಾಷ್ ಬೇಸಿನ್‍ಗಳನ್ನು ತಪ್ಪದೇ ಅಳವಡಿಸಬೇಕು ಎಂದು ತಿಳಿಸಿದರು.
ದೇವಸ್ಥಾನದಲ್ಲಿ ಹೂವಿನ ಅಲಂಕಾರ ಹಾಗೂ ಆಕರ್ಷಣೀಯವಾಗಿ ವಿದ್ಯುತ್ ದೀಪಾಲಂಕಾರ ಅಳವಡಿಸಬೇಕು. ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ. ಜಿಲ್ಲೆಯ ಪ್ರವಾಸಿ ತಾಣಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಕಡಿಮೆ ದರದಲ್ಲಿ ಪ್ಯಾಕೇಜ್ ನೀಡುವ ಹೆಚ್ಚು ಪ್ರವಾಸಿಗರು ಆಕರ್ಷಿಸುವಂತೆ ಮಾಡಬೇಕು ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್‌ಕುಮಾರ್, ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ, ಜಂಟಿ ಕೃಷಿ ನಿರ್ದೇಶಕ ರಮೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.