ADVERTISEMENT

ಹಾಸನದಲ್ಲಿ ಏಪ್ರಿಲ್‌ನಿಂದ ಜನಗಣತಿ; ಎಲ್ಲ ಅಧಿಕಾರಿಗಳು ಪಾಲ್ಗೊಳ್ಳಬೇಕು: ಡಿಸಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 3:28 IST
Last Updated 22 ಫೆಬ್ರುವರಿ 2026, 3:28 IST
ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ, ಜನರ ಅಹವಾಲು ಆಲಿಸಿದರು.
ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ, ಜನರ ಅಹವಾಲು ಆಲಿಸಿದರು.   

ಹಾಸನ: ‘ಏಪ್ರಿಲ್ ತಿಂಗಳಲ್ಲಿ ಜನಗಣತಿ ಪ್ರಾರಂಭವಾಗುತ್ತಿದ್ದು, 2 ಹಂತದಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆ ಮನೆಗಳ ಸಮೀಕ್ಷೆ ಏಪ್ರಿಲ್ 16 ರಿಂದ ಮೇ 16 ರವರೆಗೆ ನಡೆಯಲಿದೆ. ಎಲ್ಲ ಅಧಿಕಾರಿಗಳು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಿದ್ಧವಾಗಿರಬೇಕು’ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಫೆ.25 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದ್ದು, ಹಿಂದಿನ ಕೆಡಿಪಿ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ಅನುಪಾಲನಾ ವರದಿಯನ್ನು ಸಿದ್ಧಪಡಿಸಬೇಕು ಎಂದು ಸೂಚಿಸಿದರು.

ಬೇಸಿಗೆ ಆರಂಭ ಆಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸಂಬಂಧಪಟ್ಟ ಅಧಿಕಾರಿಗಳು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಶುಪಾಲನಾ ಇಲಾಖೆಯವರು ಮಾಡಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಪರಿಶೀಲಿಸಿ ಮುಂಜಾಗ್ರತಾ ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕಂಟ್ರೋಲ್ ರೂಂ ತೆರೆಯಬೇಕು. ಕಂಟ್ರೋಲ್ ರೂಂ ಸರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ADVERTISEMENT

ಮಾರ್ಚ್‌ನಲ್ಲಿ ಉದ್ಯೋಗ ಮೇಳವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಆಯೋಜನೆ ಮಾಡಲಾಗುತ್ತಿದ್ದು, ಇದರಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳೂ ಪಾಲ್ಗೊಳ್ಳಬೇಕು. ಹೆಚ್ಚಿನ ಪ್ರಚಾರ ನೀಡಬೇಕು ಎಂದರು.

ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗವಹಿಸಬಹುದು. ಜಿಲ್ಲೆಯ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಭೂ ದಾಖಲೆಗಳ ಉಪ ನಿರ್ದೇಶಕ ಹೇಮಲತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

‘ಅರ್ಜಿ ಪುನರಾವರ್ತನೆ ಆದರೆ ಕ್ರಮ’

‘ಜನಸ್ಪಂದನ ಸಭೆಯಲ್ಲಿ ಸಲ್ಲಿಸಿದ ಅರ್ಜಿಗಳು ಪುನರಾವರ್ತಿತವಾದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಎಚ್ಚರಿಕೆ ನೀಡಿದರು. ಶನಿವಾರ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಸನ ಚನ್ನರಾಯಪಟ್ಟಣ ಸಕಲೇಶಪುರದಲ್ಲಿ ಜನಸ್ಪಂದನ ಸಭೆಯಲ್ಲಿ ಸಲ್ಲಿಸಿರುವ ಅರ್ಜಿಗಳು ಬಾಕಿ ಇದ್ದು ಕೂಡಲೇ ವಿಲೇವಾರಿ ಮಾಡಬೇಕು ಎಂದರು.

ಸಭೆಯಲ್ಲಿ ಸಾರ್ವಜನಿಕರು 493 ಅರ್ಜಿಗಳನ್ನು ಸ್ವೀಕರಿಸಿ ಸಾಧ್ಯವಾಗುವ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಯಿತು. ಕೆಲವನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದರು. ದುರಸ್ತಿ ಪೋಡಿ ಹಾಗೂ ಪೌತಿ ಖಾತೆ ಜಮೀನಿಗಳಿಗೆ ತೆರಳಲು ರಸ್ತೆಗಳು ಸರ್ಕಾರಿ ಕೆರೆ ಹಾಗೂ ರಾಜ ಕಾಲುವೆ ಒತ್ತುವರಿ ವಿಷಯಗಳಲ್ಲಿ ಹೆಚ್ಚಿನ ಅರ್ಜಿ ಸಲ್ಲಿಕೆಯಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.