
ಹಾಸನ: ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಮತ್ತು ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031ರ ಅಂಕಿ ಅಂಶದ ಆಧಾರದ ಮೇಲೆ ಮುಂದಿನ ಅಭಿವೃದ್ಧಿಗೆ ಅನುಕೂಲ ಆಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ.ಆರ್. ಹೇಳಿದರು.
ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಮತ್ತು ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ದಿ ದೂರದೃಷ್ಟಿ ಯೋಜನೆ-2031 ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ತಾಯಂದಿರ ಮರಣ, ಶಿಶು ಮರಣ, ಶಾಲೆ ಬಿಟ್ಟ ಮಕ್ಕಳ ಸಂಖ್ಯೆಗಳನ್ನು ನಿಖರವಾಗಿ ದಾಖಲಿಸಬೇಕು. ಗ್ರಾಂ ಪಂಚಾಯಿತಿ ಮಟ್ಟದಲ್ಲಿ 17 ಮಾನದಂಡಗಳನ್ನು ಗುರುತಿಸಲಾಗಿದೆ. ಅದರಂತೆ ವರದಿ ತಯಾರಿಸಬೇಕು ಎಂದರು.
ಜೀವನದ ಗುಣಮಟ್ಟ, ಶಿಕ್ಷಣ ಮತ್ತು ಆರೋಗ್ಯವನ್ನು ಮೂಲ ಮಾನದಂಡವಾಗಿ ಪರಿಗಣಿಸಲಾಗುತ್ತದೆ. ಕರ್ನಾಟಕದಲ್ಲಿ ಶೇ 26 ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ. ಭಾರತದಲ್ಲಿ ಶೇ 80 ಸಾಕ್ಷರತೆ ಇದೆ. ಆಹಾರ ಉತ್ಪಾದನೆಯಲ್ಲಿ 2ನೇ ಸ್ಥಾನದಲ್ಲಿ ಇದ್ದೇವೆ ಎಂದು ತಿಳಿಸಿದರು.
ಜಿಲ್ಲಾ ಮಾನವ ಅಭಿವೃದ್ಧಿ ವರದಿಯನ್ನು ನಿಖರವಾಗಿ ತಯಾರಿಸಬೇಕು. ಸಂಬಂಧಿಸಿದ ಇಲಾಖೆಗಳು ಮಾಹಿತಿಯನ್ನು ಫೆ. 10 ರೊಳಗೆ ನೀಡಬೇಕು ಎಂದರು.
ಇಲಾಖೆಗಳಿಗೆ ಬಂದಿರುವ ಅನುದಾನ ಮಾರ್ಚ್ ವೇಳೆಗೆ ಶೇ 100 ರಷ್ಟು ಸದ್ಬಳಕೆ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಯೋಜನೆ ರೂಪಿಸಿಕೊಳ್ಳಬೇಕು ಎಂದು ಸೂಚಿಸಿದರು.
ಎಸ್‍ಐಆರ್‌ಡಿ ಸಮಾಲೋಚಕ ಗಣೇಶ್ ಪ್ರಸಾದ್ ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ 2031 ದೇಶದ ಪ್ರಗತಿಯನ್ನು ತಿಳಿಸುವ ಕನ್ನಡಿಯಾಗಿದೆ ಎಂದು ತಿಳಿಸಿದರು.
ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ ಮಾಡಲಾಗುತ್ತದೆ. ರೈಲ್ವೆ ಸಾರಿಗೆಯಲ್ಲಿ ಪ್ರಪಂಚದಲ್ಲಿಯೇ ಮೊದಲ ಸ್ಥಾನದಲ್ಲಿದ್ದೇವೆ. ಆರೋಗ್ಯ ಸೇವೆ ಉತ್ತಮವಾಗಿದೆ. ನಮ್ಮ ದೇಶ ಸಾಕಷ್ಟು ಪ್ರಗತಿ ಸಾಧಿಸಿದ್ದರೂ ಹಲವು ಕೊರತೆ ಸಹ ಎದುರಿಸುತ್ತಿದೆ ಎಂದರು.
ಭಾರತದ ಮಾನವ ಅಭಿವೃದ್ಧಿ ಸೂಚ್ಯಂಕ 0.629 ಇದ್ದು, ರಾಜ್ಯದ ಮಾನವ ಅಭಿವೃದ್ಧಿ ಸೂಚ್ಯಂಕ 0.644 ಇದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎನ್. ಕೃಷ್ಣಮೂರ್ತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.