ADVERTISEMENT

ಹಾಸನ ಗಣೇಶ ಮೆರವಣಿಗೆ ದುರಂತ: ಸ್ಥಳಕ್ಕೆ ನಿಖಿಲ್ ಭೇಟಿ, ಕುಮಾರಸ್ವಾಮಿ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 17:32 IST
Last Updated 12 ಸೆಪ್ಟೆಂಬರ್ 2025, 17:32 IST
   

ಹಾಸನ: ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದು, ಯುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ರಾತ್ರಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ನಂತರ ಗಾಯಾಳುಗಳನ್ನು ದಾಖಲಿಸಲಾಗಿರುವ ಆಸ್ಪತ್ರೆಗೂ ತೆರಳಲಿದ್ದಾರೆ. ಅವರು ಬಾಧಿತರನ್ನು ಹಾಗೂ ಅವರ ಕುಟುಂಬದವರನ್ನು ಭೇಟಿಯಾಗಿ ಧೈರ್ಯ ತುಂಬಿ, ಚಿಕಿತ್ಸಾ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ.

ಕುಮಾರಸ್ವಾಮಿ ಸಾಂತ್ವನ:

ADVERTISEMENT

ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.