ADVERTISEMENT

ಹಾಸನ: ಸೆಪ್ಟೆಂಬರ್ ವೇಳೆಗೆ ಸಂಚಾರಕ್ಕೆ ಮುಕ್ತ

ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಶ್ರೇಯಸ್ ಪಟೇಲ್ ಭರವಸೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2026, 7:30 IST
Last Updated 3 ಜನವರಿ 2026, 7:30 IST
ಹಾಸನದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಶ್ರೇಯಸ್‌ ಪಟೇಲ್‌, ಸ್ಥಳೀಯರ ಜೊತೆಗೆ ಚರ್ಚಿಸಿದರು 
ಹಾಸನದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಶ್ರೇಯಸ್‌ ಪಟೇಲ್‌, ಸ್ಥಳೀಯರ ಜೊತೆಗೆ ಚರ್ಚಿಸಿದರು    

ಹಾಸನ: ನಗರದ ಎನ್.ಆರ್. ವೃತ್ತದಿಂದ ಚನ್ನಪಟ್ಟಣ ಹೊಸ ಬಸ್ ನಿಲ್ದಾಣದವರೆಗೆ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದ ಶ್ರೇಯಸ್ ಪಟೇಲ್ ಶುಕ್ರವಾರ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

ಕಾಮಗಾರಿಯ ಪ್ರಗತಿ, ತಾಂತ್ರಿಕ ಅಡಚಣೆಗಳು ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶ್ರೇಯಸ್ ಪಟೇಲ್‌, ಎನ್.ಆರ್. ವೃತ್ತದ ಬಲಭಾಗದಲ್ಲಿ ನಿಗದಿಪಡಿಸಿರುವ ಸರ್ವಿಸ್ ರಸ್ತೆ ಅವೈಜ್ಞಾನಿಕವಾಗಿ ರೂಪುಗೊಂಡಿದ್ದು, ಇದರಿಂದ ಮುಖ್ಯ ವೃತ್ತದಲ್ಲಿ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ತೀವ್ರ ತೊಂದರೆ ಎದುರಾಗುತ್ತಿದೆ ಎಂದು ಅಧಿಕಾರಿಗಳ ಗಮನ ಸೆಳೆದರು.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸಂಬಂಧಿಸಿದ ಎಲ್ಲ ಇಲಾಖೆ ಅಧಿಕಾರಿಗಳು ಜಂಟಿ ಸರ್ವೆ ನಡೆಸಿ, ವೈಜ್ಞಾನಿಕ ಹಾಗೂ ಶಾಶ್ವತ ಪರಿಹಾರದ ಕುರಿತು ವಾರದೊಳಗೆ ವರದಿ ಸಲ್ಲಿಸುವಂತೆ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ಕಾಮಗಾರಿಯಿಂದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಆಗದಂತೆ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಕಾಮಗಾರಿಗೆ ಅನುದಾನದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಜ್ಯ ಸರ್ಕಾರ ತನ್ನ ಪಾಲಿನ ₹ 24 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದ ಬಳಿಕ ಕಾಮಗಾರಿಗೆ ಸಾಕಷ್ಟು ವೇಗ ಸಿಕ್ಕಿದೆ. ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿ ಆದಷ್ಟು ಶೀಘ್ರವಾಗಿ ಕೆಲಸವನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು 2026ರ ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವ ಗುರಿ ಇತ್ತು . ಆದರೆ ಕಾಮಗಾರಿಯ ಸ್ವರೂಪ ಹಾಗೂ ವಿವಿಧ ತಾಂತ್ರಿಕ ಅಡಚಣೆಗಳನ್ನು ಗಮನಿಸಿದರೆ ನಿಗದಿತ ಗಡುವಿನೊಳಗೆ ಕೆಲಸ ಮುಗಿಸುವುದು ಅಸಾಧ್ಯವಾಗಿದೆ. ಹೀಗಾಗಿ ಜೂನ್‌ಗೆ ಸಾಧ್ಯವಾಗದಿದ್ದಲ್ಲಿ, ಆಗಸ್ಟ್–ಸೆಪ್ಟೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮೇಲ್ಸೇತುವೆಯನ್ನು ಮುಕ್ತಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ರೈಲ್ವೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರೈಲ್ವೆ ಮೇಲ್ಸೇತುವೆ ನಿರ್ಮಾಣವು ಕೇವಲ ಮೂಲಸೌಕರ್ಯ ಅಭಿವೃದ್ಧಿಗೆ ಸೀಮಿತವಾಗಿರದೇ ಸುತ್ತಲಿನ ನಿವಾಸಿಗಳು ಹಾಗೂ ವ್ಯಾಪಾರಸ್ಥರು ಎದುರಿಸುತ್ತಿರುವ ಸಮಸ್ಯೆಗಳಿಗೂ ಪರಿಹಾರ ಒದಗಿಸಬೇಕಿದೆ
– ಶ್ರೇಯಸ್ ಪಟೇಲ್‌, ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.