
ಹಾಸನ: ಹದಿಹರೆಯದಲ್ಲಿ ಮಾಡುವ ತಪ್ಪಿಗಾಗಿ ಜೀವನ ಪೂರ್ತಿ ಕಷ್ಟ ಅನುಭವಿಸಬೇಕಾಗುತ್ತದೆ. ಬಾಲ್ಯದಲ್ಲಿಯೇ ಪೋಕ್ಸೊ ಕಾಯ್ದೆಯ ಬಗ್ಗೆ ಎಲ್ಲರಲ್ಲೂ ಹೆಚ್ಚಿನ ಜಾಗೃತಿ ಅಗತ್ಯವಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ತಿಳಿಸಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ರಕ್ಷಣಾ ಘಟಕಗಳ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆ ಮತ್ತು ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪೋಕ್ಸೊ ಕಾಯ್ದೆ ಮಕ್ಕಳಿಗೆ ಪರಿಣಾಮಕಾರಿ ರಕ್ಷಕ. ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳನ್ನು ತಡೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಕುಟುಂಬದ ಹಂತದಲ್ಲಿಯೇ ಮಕ್ಕಳಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ. 18 ವರ್ಷದ ಒಳಗಿನ ಮಕ್ಕಳಲ್ಲಿ ಸರಿ– ತಪ್ಪುಗಳ ಬಗ್ಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇರುವುದಿಲ್ಲ ಚಂಚಲ ಮನಸ್ಥಿತಿಯನ್ನು ಹಿಡಿತದಲ್ಲಿ ಇಟ್ಟುಕೊಂಡರೆ ಭವಿಷ್ಯ ಉತ್ತಮವಾಗಿರಲು ಸಾಧ್ಯ ಎಂದರು.
ಬೇರೆಯವರ ಮಕ್ಕಳನ್ನು ತಮ್ಮ ಮಕ್ಕಳಂತೆ ಭಾವಿಸಿದಾಗ ಅವರ ಮೇಲೆ ನಡೆಯುವ ದೌರ್ಜನ್ಯಗಳನ್ನು ಪಡೆಯಲು ಸಾಧ್ಯ, ಮಕ್ಕಳ ಮೇಳಿನ ಅಪರಾಧ ಹಾಗೂ ಅದರ ಪರಿಣಾಮಗಳ ಬಗ್ಗೆ ಕುಟುಂಬ, ಶಾಲಾ ಹಂತದಲ್ಲಿ ಜಾಗೃತಿ ಮೂಡಿದಲ್ಲಿ ಮಕ್ಕಳ ರಕ್ಷಣೆ ಸಾಧ್ಯ, ಮಕ್ಕಳ ರಕ್ಷಣೆಗೆ ಜಾತಿ ಬೇಧವಿಲ್ಲದೇ, ಎಲ್ಲರೂ ಒಗ್ಗಟ್ಟಾಗಿ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಹೇಳಿದರು.
ಪೋಷಕರು ಆಸ್ತಿ ಮಾಡುವ ಬದಲು, ಮಕ್ಕಳಿಗೆ ವಿದ್ಯೆ ಹಾಗೂ ಸಂಸ್ಕಾರವನ್ನು ನೀಡಬೇಕು. ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ದೊರೆತರೆ ಕುಟುಂಬ, ಜಿಲ್ಲೆ, ರಾಜ್ಯ ಹಾಗೂ ದೇಶದ ಆಸ್ತಿಯಾತ್ತಾರೆ. ಪ್ರತಿಯೊಬ್ಬ ಪೋಷಕರು ಮಕ್ಕಳನ್ನು ದೇಶದ ಆಸ್ತಿಯಾಗುವಂತೆ ಬೆಳೆಸಬೇಕು. ಶಿಕ್ಷಕರು ವಿದ್ಯಾರ್ಥಿಯಲ್ಲಿ ಇರುವ ಕೊರತೆ ಗಮನಿಸಬೇಕು. ಯಾವ ವಿಷಯದಲ್ಲಿ ಕೌಶಲವಿಲ್ಲ ಎಂಬುದನ್ನು ಅರಿಯಬೇಕು. ಇಲ್ಲದಿದ್ದರೆ ಶಿಕ್ಷಕ ವೃತ್ತಿಗೆ ಅರ್ಹರಾಗುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಾಗಿರುವ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣ ಗಮನಿಸಿದರೆ, ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ಕೊಡಬೇಕು ಪೋಷಕರು, ಶಿಕ್ಷಕರರು ಕಾಳಜಿ ವಹಿಸುವುದು ಮುಖ್ಯ. ಮಕ್ಕಳ ರಕ್ಷಣೆಯು ಪೋಷಕರು, ಶಿಕ್ಷಕರು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಹಿರಿಯ ಸಿವಿಲ್ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಮಕ್ಕಳಿಗೆ ಸಂಬಂಧಿಸಿದಂತೆ 182 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 98 ಪ್ರಕರಣಗಳು ಬಾಲ್ಯ ವಿವಾಹಕ್ಕೆ ಸಂಬಂಧಿಸಿವೆ. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.ವೆಂಕಟೇಶ್ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ 1098 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಗೌಪ್ಯತೆ ಕಾಪಾಡಿಕೊಂಡು ಪ್ರಕರಣ ಇತ್ಯರ್ಥ ಮಾಡಲಾಗುವುದು.ಡಾ.ಸಿ.ವಿ. ಸ್ನೇಹಾ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.