ADVERTISEMENT

ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ: ರೇವಣ್ಣ

ಶಾಸಕರ ಹಕ್ಕು ಕಸಿದುಕೊಳ್ಳದಿರಿ ಎಂದು ಸ್ಪೀಕರ್‌ಗೆ ಮನವಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 14:14 IST
Last Updated 8 ಜನವರಿ 2020, 14:14 IST
ಎಚ್‌.ಡಿ.ರೇವಣ್ಣ
ಎಚ್‌.ಡಿ.ರೇವಣ್ಣ   

ಹಾಸನ: ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡದೆ ಶಾಸಕರ ಹಕ್ಕು ಕಸಿದುಕೊಳ್ಳಲಾಗುತ್ತಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಆರೋಪಿಸಿದರು.

ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಲಿಲ್ಲ. ಈ ಬಾರಿಯೂ ಅವಕಾಶ ನೀಡುವುದಿಲ್ಲ ಎಂಬ ಮಾಹಿತಿ ಗೊತ್ತಾಗಿದೆ. ಅದಕ್ಕೆ ಅವಕಾಶ ನೀಡುವುದಿಲ್ಲ. ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವುದು ಶಾಸಕರ ಹಕ್ಕು. ಜಿಲ್ಲೆಯ ಪಕ್ಷದ ಆರು ಶಾಸಕರು ಸ್ಪೀಕರ್‌ ಅವರಿಗೆ ಪತ್ರ ಬರೆಯಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಹೇಳಿದರು.

ಬಿಜೆಪಿ ಸರ್ಕಾರ ರಚಿಸಿ ಆರು ತಿಂಗಳು ಕಳೆದರೂ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಕೈಗೊಂಡಿದ್ದ ಐದು ಸಾವಿರ ಕೋಟಿ ರೂಪಾಯಿ ವೆಚ್ಚದ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ವೋಟು ಕೊಡಲಿಲ್ಲ ಎಂಬ ಕಾರಣಕ್ಕೆ ಹಣ ನೀಡಿರಲಿಲ್ಲ. ಆದರೆ ಈಗ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹೀಗಿರುವಾಗ ಹಿಂದಿನ ಸಮ್ಮಿಶ್ರ ಸರ್ಕಾರ ಮಂಜೂರು ಮಾಡಿದ್ದ ಯೋಜನೆಗಳಿಗೆ ಏಕೆ ಅನುದಾನ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ADVERTISEMENT

ಹಲವು ಕಾಮಗಾರಿಗಳು ಟೆಂಡರ್ ಪೂರ್ಣಗೊಂಡಿದ್ದರೂ ತಡೆ ಹಿಡಿಯಲಾಗಿದೆ. ಇತರ ಇಲಾಖೆಗಳ ಅನುದಾನವನ್ನು ತಡೆ ಹಿಡಿಯಲಾಗಿದೆ. ಸುವರ್ಣ ಕರ್ನಾಟಕ ಮಾಡಲು ಹೊರಟ ಸಿ.ಎಂ ಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಆದರೆ ಮುಖ್ಯಮಂತ್ರಿ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಮುಂದೆ ದ್ವೇಷದ ರಾಜಕೀಯ ಅವರಿಗೆ ತಿರುಗುಬಾಣವಾಗಲಿದೆ ಎಂದು ಎಚ್ಚರಿಸಿದರು.

ಜೆಡಿಎಸ್‌, ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಮಂಜೂರಾಗಿರುವ ಯೋಜನೆಗಳಿಗೆ ಅನುದಾನ ನೀಡಬೇಕು. ಹಾಸನದ ಸೋಮನಹಳ್ಳಿ ಕಾವಲ್‌ನಲ್ಲಿ ತೋಟಗಾರಿಕೆ ಮಹಾವಿದ್ಯಾಲಯಕ್ಕೂ ತಡೆ ನೀಡಲಾಗಿದೆ. ಆನೆ ಹಾವಳಿ ಪ್ರದೇಶಗಳಲ್ಲಿ ವಸತಿ ಶಾಲೆ ಆರಂಭಿಸಲು ಉದ್ದೇಶಿಸಲಾಗಿತ್ತು. ಅದಕ್ಕೂ ಅನುಮತಿ ನೀಡಿಲ್ಲ. ಇದೇ ರೀತಿ ಮಾಡಿದರೆ ರಾಜ್ಯ ಸರ್ಕಾರವನ್ನು ‘ತಡೆ ಹಿಡಿಯುವ ಸರ್ಕಾರ’ ಎಂದು ಕರೆಯಬೇಕಾಗುತ್ತದೆ. ಹತ್ತು ದಿನ ನೋಡಿ ಹೋರಾಟ ರೂಪಿಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ 20 ಶಾಸಕರು ಕುಮಾರಸ್ವಾಮಿ ಜತೆ ಸಂರ್ಪಕದಲ್ಲಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌, ಜೆಡಿಎಸ್‌ ಮತ್ತೆ ಮೈತ್ರಿ ಮಾಡಿಕೊಳ್ಳಲಾಗುತ್ತಿದಯೇ ಎಂಬ ಪ್ರಶ್ನೆಗೆ, ದೆಹಲಿ ರಾಜಕೀಯ ಬಗ್ಗೆ ಮಾಹಿತಿ ಇಲ್ಲ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.