ADVERTISEMENT

ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆ: ಹೆಚ್ಚಿದ ಒಳಹರಿವು; ಹೇಮೆಗೆ ನೀರು‌

ನದಿ ತೀರದ ಜನರಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2025, 5:48 IST
Last Updated 28 ಜುಲೈ 2025, 5:48 IST
ಹಾಸನ ತಾಲ್ಲೂಕಿನ ಗೊರೂರಿನ ಹೇಮಾವತಿ ಜಲಾಶಯದಿಂದ ಭಾನುವಾರ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಸಲಾಯಿತು
ಹಾಸನ ತಾಲ್ಲೂಕಿನ ಗೊರೂರಿನ ಹೇಮಾವತಿ ಜಲಾಶಯದಿಂದ ಭಾನುವಾರ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಸಲಾಯಿತು   

ಹಾಸನ: ಪಶ್ಚಿಮ ಘಟ್ಟದ ಚಿಕ್ಕಮಗಳೂರು ಜಿಲ್ಲೆ ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹೇಮಾವತಿ ನದಿಯ ಒಳಹರಿವು ಹೆಚ್ಚಳವಾಗಿದೆ. ನದಿಗೆ 38 ಸಾವಿರ ಕ್ಯುಸೆಕ್‌ ಒಳಹರಿವು ದಾಖಲಾಗಿದ್ದು, 46 ಸಾವಿರ ಕ್ಯುಸೆಕ್‌ ನೀರನ್ನು ನದಿ ಹಾಗೂ ಕಾಲುವೆಗೆ ಹರಿಸಲಾಗಿದೆ.

ಶನಿವಾರ ರಾತ್ರಿ 46,350 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗಿದ್ದು, ಭಾನುವಾರ ಬೆಳಿಗ್ಗೆ 39 ಸಾವಿರ ಕ್ಯುಸೆಕ್‌ ನೀರು ಹರಿಸಲಾಗಿದೆ.

ಕೆಲ ದಿನಗಳಿಂದ ತುಂತುರು ಸುರಿಯುತ್ತಿದ್ದ ಮಳೆ, ಶನಿವಾರದಿಂದ ಮತ್ತೆ ಬಿರುಸುಗೊಂಡಿದೆ. ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಹೇಮಾವತಿ ಉಪನದಿಗಳು ತುಂಬಿ ಹರಿಯುತ್ತಿವೆ. ಇದರ ಜೊತೆಗೆ ಎತ್ತಿನಹೊಳೆ ಯೋಜನೆಯ ನೀರೂ ಹೇಮಾವತಿ ನದಿಗೆ ಸೇರುತ್ತಿದ್ದು, ಜಲಾಶಯದ ಒಳಹರಿವು ದಿಢೀರ್‌ ಹೆಚ್ಚಾಗಿದೆ.

ADVERTISEMENT

ಇದರಿಂದಾಗಿ ಜಲಾಶಯದಲ್ಲಿ ನೀರಿನ ಮಟ್ಟ ಕಾಪಾಡಿಕೊಂಡು, ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಅರಕಲಗೂಡು, ಹೊಳೆನರಸೀಪುರ, ಚನ್ನರಾಯಪಟ್ಟಣ ತಾಲ್ಲೂಕುಗಳು ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್‌. ಪೇಟೆ ತಾಲ್ಲೂಕಿನ ನದಿ ತೀರದ ನಿವಾಸಿಗಳು ಎಚ್ಚರದಿಂದ ಇರುವಂತೆ ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.

ಕಾವೇರಿಯಲ್ಲೂ ಪ್ರವಾಹ

ಹಾರಂಗಿ ಜಲಾಶಯದಿಂದ 32 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗಿದ್ದು, ಅರಕಲಗೂಡು ತಾಲ್ಲೂಕಿನ ಕೊಣನೂರು, ರಾಮನಾಥಪುರ ಹೋಬಳಿಗಳಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.