ADVERTISEMENT

ಮುಜುಗರ ಆಗದ ರೀತಿ ಕೆಲಸ ಮಾಡುವೆ: ಹುಡಾ ಅಧ್ಯಕ್ಷ ಪಟೇಲ್ ಶಿವಪ್ಪ

ಹುಡಾ ಅಧ್ಯಕ್ಷ ಪಟೇಲ್ ಶಿವಪ್ಪಗೆ ನಗರದಲ್ಲಿ ಅದ್ದೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 4:50 IST
Last Updated 5 ಅಕ್ಟೋಬರ್ 2025, 4:50 IST
ಅರಸೀಕೆರೆಯಲ್ಲಿ ಶನಿವಾರ ಹುಡಾ ಅಧ್ಯಕ್ಷ ಪಟೇಲ್‌ ಶಿವಪ್ಪ ಅವರನ್ನು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಸನ್ಮಾನಿಸಿದರು.
ಅರಸೀಕೆರೆಯಲ್ಲಿ ಶನಿವಾರ ಹುಡಾ ಅಧ್ಯಕ್ಷ ಪಟೇಲ್‌ ಶಿವಪ್ಪ ಅವರನ್ನು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಸನ್ಮಾನಿಸಿದರು.   

ಅರಸೀಕೆರೆ: ಹಾಸನ ನಗರಾಭಿವೃದ್ಧಿ ಪ್ರಾಧಿಕಾರ (ಹುಡಾ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಟೇಲ್ ಶಿವಪ್ಪ ಅವರನ್ನು ಶನಿವಾರ ನಗರದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಶಿವಪ್ಪ, ನಂತರ ಪ್ರಸನ್ನ ಗಣಪತಿ ಆಸ್ಥಾನ ಮಂಟಪಕ್ಕೆ ತೆರಳಿ, ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದರು. ನಂತರ ಪ್ರವಾಸಿ ಮಂದಿರಕ್ಕೆ ತೆರಳಿ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲರಿಂದಲೂ ಅಭಿನಂದನೆ ಸ್ವೀಕರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಜಿಲ್ಲಾ ಪಂಚಾಯಿತಿ ಸದಸ್ಯನಾಗಿ, ಕೆಪಿಸಿಸಿ ಕಾರ್ಯದರ್ಶಿಯಾಗಿ ಪಕ್ಷ ನೀಡಿದ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ, ಗಂಡಸಿ ಹಾಗೂ ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಹಿರಿಯರು ನನ್ನನ್ನು ಹುಡಾ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಿದ್ದರು. ಎಲ್ಲರ ಆಶಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನನ್ನನ್ನು ಹುಡಾ ಅಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ ಎಂದು ಹೇಳಿದರು.

ADVERTISEMENT

ಹುಡಾ ಅಧ್ಯಕ್ಷ ಸ್ಥಾನ ಸಾಮಾನ್ಯ ಹುದ್ದೆಯಲ್ಲ. ಪಕ್ಷ ಹಾಗೂ ಮುಖಂಡರು ಸೇರಿದಂತೆ, ಅರಸೀಕೆರೆ ತಾಲ್ಲೂಕಿನ ಜನತೆಗೆ ಮುಜುಗರ ಆಗದ ರೀತಿ ಕೆಲಸ ಮಾಡುವೆ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಮುಖಂಡ ಜಿ.ಬಿ. ಶಶಿಧರ್ ಮಾತನಾಡಿ, ಶಿವಪ್ಪ ಅವರ ಪಕ್ಷ ನಿಷ್ಠೆಗೆ ಹಾಗೂ ಅವರಲ್ಲಿರುವ ಸಾಮಾಜಿಕ ಕಳಕಳಿ ಗುರುತಿಸಿ ಜವಾಬ್ದಾರಿ ನೀಡಲಾಗಿದೆ. ಸೂಕ್ತ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಸೂಕ್ತ ಸ್ಥಾನಮಾನ ನೀಡಲಿದೆ ಎಂಬುದಕ್ಕೆ ಶಿವಪ್ಪ ಅವರೇ ಸಾಕ್ಷಿ ಎಂದರು.

ನಗರಸಭೆ ಅಧ್ಯಕ್ಷ ಎಂ.ಸಮೀವುಲ್ಲಾ ಮಾತನಾಡಿ, ಪಟೇಲ್ ಶಿವಪ್ಪ ಹುಡಾ ಅಧ್ಯಕ್ಷರಾಗಿರುವುದು ಸಂತಸದ ವಿಷಯ. ಜಿಲ್ಲೆಯ ಅಭಿವೃದ್ಧಿಗೆ ಅವರಿಂದ ಕೊಡುಗೆ ದೊರೆಯಲಿದೆ ಎಂದರು.

ನಗರಸಭೆ ಉಪಾಧ್ಯಕ್ಷ ಮನೋಹರ್ ಮೇಸ್ತ್ರಿ, ನಗರಸಭೆ ಸದಸ್ಯ ವೆಂಕಟಮುನಿ, ಕಾಂಗ್ರೆಸ್ ಮುಖಂಡರಾದ ಗೌಸ್‌ಖಾನ್, ಉಮಾಶಂಕರ್, ಸುಬ್ರಹ್ಮಣ್ಯ, ಬಾಬು, ಯೂನಸ್, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಸಿಖಂದರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಈಶ್ವರಪ್ಪ, ಹನುಮೇಗೌಡ, ಮುಖಂಡ ಮೋಹನ್ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.