ADVERTISEMENT

ಹಾಸನ| ಅಕ್ರಮ ಮರಳು ಸಾಗಣೆ: 2 ಟಿಪ್ಪರ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 7:24 IST
Last Updated 4 ಜನವರಿ 2026, 7:24 IST
ವಶಕ್ಕೆ ಪಡೆದಿರುವ ಟಿಪ್ಪರ್‌ಗಳು 
ವಶಕ್ಕೆ ಪಡೆದಿರುವ ಟಿಪ್ಪರ್‌ಗಳು    

ಹಾಸನ: ಸಕಲೇಶಪುರ ತಾಲ್ಲೂಕಿನ ಹಾಲೇ ಬೇಲೂರು ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಮರಳು ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸುಪ್ರೀತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಮರಳು ಸಾಗಣೆ ಬಗ್ಗೆ ಸ್ಥಳೀಯರಿಂದ ನಿರಂತರವಾಗಿ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ, ತಾಲ್ಲೂಕು ಆಡಳಿತ ಈ ಕಾರ್ಯಾಚರಣೆ ನಡೆಸಿದೆ.

ದಾಳಿ ವೇಳೆ ಯಾವುದೇ ಪರವಾನಗಿ ಇಲ್ಲದೇ ಮರಳು ಸಾಗಿಸುತ್ತಿರುವುದು ದೃಢಪಟ್ಟಿದ್ದು, ಗಣಿ ಮತ್ತು ಖನಿಜಗಳ ಅಭಿವೃದ್ಧಿ ಹಾಗೂ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ADVERTISEMENT

ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಣೆಯಿಂದ ಪರಿಸರದ ಹಾನಿಯ ಜೊತೆಗೆ ಸರ್ಕಾರಕ್ಕೆ ರಾಜಸ್ವ ನಷ್ಟ ಉಂಟಾಗುತ್ತಿದೆ. ಇಂತಹ ಕೃತ್ಯಗಳ ವಿರುದ್ಧ ಯಾವುದೇ ರೀತಿಯ ಸಡಿಲಿಕೆ ನೀಡಲಾಗುವುದಿಲ್ಲ ಎಂದು ತಹಶೀಲ್ದಾರ್ ಸುಪ್ರೀತಾ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಣೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ. ಸಾರ್ವಜನಿಕರು ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಆಡಳಿತಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.