ADVERTISEMENT

‘ನಿವೇಶನಕ್ಕೆ ಶೀಘ್ರ ಸ್ಥಳ ಗುರುತಿಸಿ’

ತಾಲ್ಲೂಕು ಅಧಿಕಾರಿಗಳಿಗೆ ಡಿಸಿ ಆರ್‌.ಗಿರೀಶ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 2:57 IST
Last Updated 28 ಅಕ್ಟೋಬರ್ 2020, 2:57 IST
ಹಾಸನ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ತಾಲ್ಲೂಕು ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು
ಹಾಸನ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ತಾಲ್ಲೂಕು ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು   

ಹಾಸನ: ‘ಗ್ರಾಮಾಂತರ ಪ್ರದೇಶಗಳಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದ್ದ ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನ ಒದಗಿಸಲು ಆಯಾ ತಾಲ್ಲೂಕುಗಳಲ್ಲಿ ಆದಷ್ಟು ಬೇಗ ಸ್ಥಳವನ್ನು ಗುರುತಿಸಿ ಮಂಜೂರಾತಿಗೆ ಕಳುಹಿಸಿ’ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಎಲ್ಲಾ ತಾಲ್ಲೂಕು ತಹಶೀಲ್ದಾರ್‌ರು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ‘ಈವರೆಗೆ ಎಷ್ಟು ನಿವೇಶನಗಳನ್ನು ನೀಡಲಾಗಿದೆ ಎಂದು ತಾಲ್ಲೂಕುವಾರು ವರದಿ ಪಡೆದು, ಅರ್ಹರಿಗೆ ನಿವೇಶನ ನೀಡಲು ತಡಮಾಡದೆ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಬೇಕು’ ಎಂದರು.

‘ಪರಿಹಾರ ಪೋರ್ಟಲ್‍ನಲ್ಲಿ ಬೆಳೆಹಾನಿ ಕುರಿತ ಮಾಹಿತಿಯನ್ನು ಸರಿಯಾಗಿ ಪರಿಶೀಲನೆ ನಡೆಸಿ ನಂತರ ನಮೂದಿಸಿ. ಕಾಫಿ ಬೆಳೆ ಸೇರಿದಂತೆ ಇತರೆ ಬೆಳೆ ಎಷ್ಟು ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದೆ ಎಂದು ಆಯಾ ತಾಲ್ಲೂಕಿನ ತಹಶೀಲ್ದಾರ್ ಹಾಗೂ ಸಂಬಂಧಪಟ್ಟಅಧಿಕಾರಿಗಳು ಸೂಕ್ತ ಮಾಹಿತಿ ಕಲೆ ಹಾಕಿ ನಿಖರ ವರದಿ ನೀಡಿ’ ಎಂದು ಹೇಳಿದರು.

ADVERTISEMENT

ಈ ಬಾರಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಪರಿಹಾರವನ್ನು ಆದಷ್ಟು ಬೇಗ ಒದಗಿಸಬೇಕು. ಅಧಿಕೃತ ಮನೆಗಳಿಗೆ ಮಾತ್ರ ದೃಢೀಕರಣ ನೀಡಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ₹ 10 ಸಾವಿರ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ನೋಂದಾಯಿತವ್ಯಾಪಾರಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಆಯಾ ತಾಲ್ಲೂಕಿನ ಮುಖ್ಯ ಅಧಿಕಾರಿಗಳು ಕ್ರಮ ವಹಿಸಿಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ. ಪರಮೇಶ್, ಉಪವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್, ಗಿರೀಶ್ ನಂದನ್ ಹಾಗೂ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.