ADVERTISEMENT

ಒಳಮೀಸಲಾತಿ: ಸೆ.9 ರಂದು ರಾಜ್ಯದಾದ್ಯಂತ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2024, 13:59 IST
Last Updated 3 ಸೆಪ್ಟೆಂಬರ್ 2024, 13:59 IST

ಹಾಸನ: ಸುಪ್ರೀಂಕೋರ್ಟ್ ತೀರ್ಪಿನಂತೆ ಪರಿಶಿಷ್ಟರ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಾ.ಎನ್‌. ಮೂರ್ತಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿಯ ಬಹುತೇಕ ಸಣ್ಣಪುಟ್ಟ ಸಮಾಜಕ್ಕೆ ನ್ಯಾಯ ದೊರೆತಿಲ್ಲ. ಸಮಗಾರ, ಮಾದಿಗ ಸೇರಿದಂತೆ ಅನೇಕರಿಗೆ ಶಿಕ್ಷಣ, ಉದ್ಯೋಗದಲ್ಲಿ ಸಮಾನವಾದ ಸ್ಥಾನ ದೊರೆತಿಲ್ಲ’ ಎಂದರು.

‘ಸುಪ್ರೀಂ ಕೋರ್ಟ್‌ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ ಮಾಡಿದರು. ಆದರೆ ಇದುವರೆಗೆ ಅನುಷ್ಠಾನಕ್ಕೆ ಕ್ರಮವಹಿಸಿಲ್ಲ. ಮತ ಬ್ಯಾಂಕ್‌ಗಾಗಿ ಮಾತ್ರ ತಳಸಮುದಾಯವನ್ನು ಬಳಸಿಕೊಳ್ಳುವ ರಾಜಕೀಯ ನಾಯಕರು ದಲಿತರ ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ’ ಎಂದು ದೂರಿದರು.

ADVERTISEMENT

ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ಅದನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡುವಂತೆ ಆಗ್ರಹಿಸಿ ರಾಜ್ಯದ ಪ್ರತಿ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ಮೆರಿಟ್ ಸ್ಕಾಲರ್‌ಶಿಪ್ ರದ್ದು ಮಾಡಲಾಗಿದೆ. ಯಾವುದೇ ಅಭಿವೃದ್ಧಿ ನಡೆಯುತ್ತಿಲ್ಲ. ಪರಿಶಿಷ್ಟ ಸಮಾಜದ ಕಟ್ಟಕಡೆಯ ಜನರಿಗೂ ಸರ್ಕಾರದ ಸೌಲಭ್ಯ ದೊರೆಯಲು ಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿ ಮಾಡಬೇಕು. ಅದನ್ನು ಬಿಟ್ಟು ರಾಜ್ಯ ಸರ್ಕಾರ ಸಭೆ, ಚರ್ಚೆ ಮಾಡುವುದಾಗಿ ಹೇಳುವ ಮೂಲಕ ಕಣ್ಣೊರೆಸುವ ತಂತ್ರ ಮಾಡಬಾರದು ಎಂದರು.

ಒಳಮೀಸಲಾತಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲು ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಧರ್ಮ, ದೇವರಾಜ್, ಮಂಜು, ಭೈರಹೊನ್ನಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.