ADVERTISEMENT

ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಹೆಚ್ಚಿಸಿ

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಜುಲೈ 2019, 20:03 IST
Last Updated 19 ಜುಲೈ 2019, 20:03 IST
ಹಾಸನದಲ್ಲಿ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಮತ್ತು ವಾಲ್ಮಿಕಿ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ್ದ ಜನಸ್ತೋಮ‌.
ಹಾಸನದಲ್ಲಿ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಮತ್ತು ವಾಲ್ಮಿಕಿ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ್ದ ಜನಸ್ತೋಮ‌.   

ಹಾಸನ: ‘ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಹೆಚ್ಚಿಸಬೇಕೆಂಬ ಒತ್ತಾಯಕ್ಕೆ ಸರ್ಕಾರ ಸ್ಪಂದಿಸುವವರೆಗೂ ಹೋರಾಟ ಮುಂದುವರೆಸಬೇಕು’ ಎಂದು ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಮತ್ತು ವಾಲ್ಮಿಕಿ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.

‘ಪರಿಶಿಷ್ಟ ಪಂಗಡ ಜನಾಂಗಕ್ಕೆ 1958ರಲ್ಲಿ ಶೇಕಡಾ 3ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಮೀಸಲಾತಿ ಜಾರಿಯಾಗಿ 60 ವರ್ಷ ಆಗಿದೆ. ಜನಸಂಖ್ಯೆಯೂ ಹೆಚ್ಚಳವಾಗಿದೆ. ಆದ್ದರಿಂದ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಹೆಚ್ಚಿಸಲೇಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಲಿಂಗಾಯತ - ವೀರಶೈವರು ಬಸವಣ್ಣ, ಒಕ್ಕಲಿಗರು ಬಾಲಗಂಗಾಧರನಾಥ ಸ್ವಾಮೀಜಿ, ಕುರುಬರು ಕನಕದಾಸ, ಪರಿಶಿಷ್ಟ ಜಾತಿಯವರು ಬಿ.ಆರ್. ಅಂಬೇಡ್ಕರ್ ಹೆಸರಿನಲ್ಲಿ ಒಟ್ಟಾಗುತ್ತಿದ್ದಾರೆ. ಅದೇ ರೀತಿ ನಾಯಕ ಸಮುದಾಯದವರು ರಾಮಾಯಣ ರಚಿಸಿದ ವಾಲ್ಮೀಕಿ ಹೆಸರಿನಲ್ಲಿ ಒಂದಾಗಬೇಕು’ ಎಂದು ಕರೆ ನೀಡಿದರು.

‘ದೇಶದಲ್ಲಿ 10 ಕೋಟಿ ವಾಲ್ಮೀಕಿ ಸಮುದಾಯದ ಜನರಿದ್ದು, ಹಕ್ಕುಗಳಿಗಾಗಿ ಹೋರಾಡಬೇಕಾದ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡಬೇಕು. ಕೇಂದ್ರ ಸಚಿವ ಸಂಪುಟದಲ್ಲಿ ಒಬ್ಬರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ಸವಲತ್ತು ಪಡೆಯಲು ಮೇಲ್ಜಾತಿಯವರು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದು, ಅದಕ್ಕೆ ಸಹಕಾರ ನೀಡುತ್ತಿರುವ ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ನಿರ್ಮಿಸಬೇಕು. ರಾಜ್ಯದ ಯಾವುದಾದರೂ ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಡಬೇಕು’ ಎಂದು ಆಗ್ರಹಿಸಿದರು.

ಸಮುದಾಯದ ಮುಖಂಡರಿಂದ ಮೀಸಲಾತಿ ಹೆಚ್ಚಳದ ರೂಪು ರೇಷೆ ಕುರಿತು ಜನಾಭಿಪ್ರಾಯ ಸಂಗ್ರಹಿಸಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಸಂಚಾಲಕ ಹರ್ತಿಕೋಟೆ ವೀರನರಸಿಂಹ, ‘ ಹೊಯ್ಸಳ ಹಾಗೂ ವಿಜಯ ನಗರ ಅರಸರ ಆಡಳಿತಾವಧಿಯಲ್ಲಿ ವಾಲ್ಮೀಕಿ ಜನರು ಪ್ರಾಬಲ್ಯ ಮೆರೆದಿದ್ದರು. ಭವಿಷ್ಯದ ಹಿತದೃಷ್ಟಿಯಿಂದ ಬೀದಿಗಿಳಿಯಬೇಕಾಗಿದ್ದು ಸಮುದಾಯದ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಸರ್ಕಾರ ನಮ್ಮಿಂದ ಎಲ್ಲವನ್ನೂ ಕಿತ್ತುಕೊಂಡಿದೆ. ಮೀಸಲಾತಿ ಹೆಚ್ಚಿಸದಿದ್ದರೆ ಭಾರಿ ತೊಂದರೆಯಾಗುತ್ತದೆ. ಬೆಂಗಳೂರಿನಲ್ಲಿ ನಾವು ನಡೆಸಿದ ಶಾಂತಿಯುತ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಅದರ ಪರಿಣಾಮ ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ, ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.