ಜಾವಗಲ್: ಗ್ರಾಮೀಣ ಪ್ರದೇಶದ ಜನರನ್ನು ಆರ್ಥಿಕವಾಗಿ ಸದೃಢಗೊಳಿಸುವ ಸಲುವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ನಿರಂತರವಾಗಿ ಜನಪರ ಯೋಜನೆಗಳನ್ನು ರೂಪಿಸುತ್ತಾ ಬಂದಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾಸನ ಜಿಲ್ಲಾ ನಿರ್ದೇಶಕಿ ಮಮತಾ ಹರೀಶ್ ರಾವ್ ತಿಳಿಸಿದರು.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಆಯೋಜಿಸಲಾಗಿದ್ದ ಸೋಲಾರ್ ದೀಪಕಂಬದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿನ ಜನರ ಜೀವನ ಮಟ್ಟವನ್ನು ಸುಧಾರಿಸುವ ಸಲುವಾಗಿ ಶುದ್ಧ ಕುಡಿವ ನೀರಿನ ಘಟಕಗಳು, ಮದ್ಯವರ್ಜನ ಶಿಬಿರಗಳು, ಪುರಾತನ ದೇವಾಲಯಗಳ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು, ಗ್ರಾಮೀಣ ಪ್ರದೇಶದಲ್ಲಿನ ಕರೆಕಟ್ಟೆಗಳನ್ನು ಸ್ವಚ್ಛಗೊಳಿಸುವುದು, ಹಾಗೂ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ರೂಪಿಸಿದೆ ಎಂದು ತಿಳಿಸಿದರು.
ಗ್ರಾಮದ ಸರ್ಕಾರಿ ಶಾಲೆಗೆ ಮೂಲ ಸೌಕರ್ಯವನ್ನು ಒದಗಿಸುವ ನಿಟ್ಟಿನಲ್ಲಿ ಭಾರತೀಯ ಜೀವವಿಮಾ ನಿಗಮದ ಅಧಿಕಾರಿಗಳ ಸಹಯೋಗದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸೋಲಾರ್ ದೀಪ ಹಾಗೂ ಕಂಬವನ್ನು ಶಾಲೆಗೆ ಉಡುಗೊರೆಯಾಗಿ ನೀಡಿದೆ ಎಂದು ತಿಳಿಸಿದರು.
ಭಾರತೀಯ ಜೀವ ವಿಮಾನ ನಿಗಮದ ಮೈಸೂರು ಭಾಗದ ಒರಿಜಿನಲ್ ಆಫೀಸರ್ ಕಾಂತರಾಜ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ, ಧರ್ಮಸ್ಥಳ ಯೋಜನಾ ಸಂಸ್ಥೆಯ ಬಾಣವಾರ ವಿಭಾಗದ ಅಧಿಕಾರಿ ಜಯಂತ್, ಎಸ್‌ಡಿಎಂಸಿ ಅಧ್ಯಕ್ಷ ಉದಯ ಜೈನ್, ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಮ್ಮ, ಸಹ ಶಿಕ್ಷಕರಾದ ಸರ್ವ ಮಂಗಳ, ಸರಸ್ವತಿ, ಚಿದಾನಂದ, ಯೋಗೀಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.