ಹಾಸನ: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ವಿರುದ್ಧ ಜೆಡಿಎಸ್ ವತಿಯಿಂದ ಆಗಸ್ಟ್ 31 ರಂದು ಧರ್ಮಸ್ಥಳ ಸತ್ಯಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಲಿಂಗೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 8 ಗಂಟೆಗೆ ಕಂದಲಿಯ ಯಗಚಿ ಶಿಕ್ಷಣ ಸಂಸ್ಥೆ ಎದುರು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಘಟಿತರಾಗಿ, ಪ್ರತ್ಯೇಕ ವಾಹನಗಳಲ್ಲಿ ಧರ್ಮಸ್ಥಳಕ್ಕೆ ತರಳಲಿದ್ದೇವೆ. ಸುಮಾರು 7 ಸಾವಿರ ಮಂದಿ ಹಾಸನದಿಂದ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ನಮ್ಮ ನಾಯಕರಾದ ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ, ಸುರೇಶ್ ಬಾಬು ಮಾರ್ಗದರ್ಶನದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಯಾತ್ರೆ ಆರಂಭವಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವ ಮೂಲಕ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಬೇಲೂರು ಹಾಗೂ ಸಕಲೇಶಪುರ ತಾಲ್ಲೂಕಿನ ಕಾರ್ಯಕರ್ತರು ನೇರವಾಗಿ ಧರ್ಮಸ್ಥಳಕ್ಕೆ ಬಂದು ಯಾತ್ರೆಯೊಂದಿಗೆ ಸೇರ್ಪಡೆಯಾಗಲಿದ್ದಾರೆ. ಧರ್ಮಸ್ಥಳ ಶತಮಾನಗಳಿಂದ ಹಿಂದೂಗಳ ಶ್ರದ್ಧಾ ಕೇಂದ್ರವಾಗಿದ್ದು, ಇದಕ್ಕೆ ಕಪ್ಪು ಮಸಿ ಬಳಿಯುವ ಯತ್ನ ನಡೆಯುತ್ತಿದೆ. ಇದನ್ನು ವಿರೋಧಿಸಿ ಯಾತ್ರೆ ಹಮ್ಮಿಕೊಂಡಿದ್ದೇವೆ ಎಂದರು.
ಧರ್ಮಸ್ಥಳ ಕ್ಷೇತ್ರದಿಂದ ಅನ್ನದಾಸೋಹ, ಶಿಕ್ಷಣ, ವೈದ್ಯಕೀಯ, ಗ್ರಾಮೀಣಾಭಿವೃದ್ಧಿ, ಸಾವಿರಾರು ದೇವಸ್ಥಾನ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬೆಂಬಲವಾಗಿ ಯಾತ್ರೆ ಹಮ್ಮಿಕೊಂಡಿರುವುದಾಗಿ ಹೇಳಿದರು.
ಧರ್ಮಸ್ಥಳ ವಿರುದ್ಧ ಷಡ್ಯಂತರ ಮಾಡಿರುವವರ ವಿರುದ್ಧ ಕಠಿಣ ಕ್ರಮ ಆಗಬೇಕು. ಸತ್ಯ ಹೊರಬರಲು ಎನ್‌ಐಎ ಮೂಲಕ ತನಿಖೆಗೆ ಆಗ್ರಹಿಸುವುದಾಗಿ ತಿಳಿಸಿದರು.
ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ, ಭಾನುವಾರ ಬೆಳಿಗ್ಗೆ 7.30 ಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಬರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಯಗಚಿ ಶಾಲಾ ಆವರಣದಲ್ಲಿ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ನಂತರ ಧರ್ಮಸ್ಥಳದ ನೇತ್ರಾವತಿ ಬಳಿ ವಾಹನಗಳನ್ನು ನಿಲುಗಡೆ ಮಾಡಿ ಕಾಲ್ನಡಿಗೆಯಲ್ಲಿ ದೇವಸ್ಥಾನ ತೆರಳಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಲಾಗುವುದು. ಮಂಜುನಾಥನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಹಿಂದಿರುಗಲಾಗುವುದು ಎಂದು ಹೇಳಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ದ್ಯಾವೇಗೌಡ, ಶೇಷಾದ್ರಿ, ಮಂಜುನಾಥ್ ಇದ್ದರು.
ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಧರ್ಮಸ್ಥಳ ಕ್ಷೇತ್ರವನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಹೊರಟಿವೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆಗಿಲೆ ಯೋಗೇಶ್ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ವಿರುದ್ಧದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ಎಸ್ಐಟಿ ತನಿಖೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಜನರ ದಿಕ್ಕು ತಪ್ಪಿಸಲು ಹಾಗೂ ಪ್ರಕರಣವನ್ನು ಜೀವಂತವಾಗಿರಿಸಲು ಮೂರು ಪಕ್ಷಗಳ ನಾಯಕರು ಸಾವಿರಾರು ಜನರನ್ನು ಸಂಘಟಿಸಿ ಧರ್ಮ ಯಾತ್ರೆ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.
ಧರ್ಮಸ್ಥಳ ಕ್ಷೇತ್ರದ ಹಾಗೂ ಧರ್ಮಾಧಿಕಾರಿಗಳ ಜನಪರ ಕಾರ್ಯದ ಬಗ್ಗೆ ನನಗೆ ಹೆಮ್ಮೆ ಇದೆ. ಆದರೆ ತನಿಖೆ ನಡೆಯುತ್ತಿರುವ ಹಂತದಲ್ಲಿ ಕ್ಷೇತ್ರವನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಸರಿಯಲ್ಲ. ಸೌಜನ್ಯ ಹತ್ಯೆ ನಂತರ ಈ ಪಕ್ಷಗಳು ಎಷ್ಟರಮಟ್ಟಿಗೆ ಆ ಕುಟುಂಬದ ಪರ ನ್ಯಾಯಕ್ಕಾಗಿ ಬೇಡಿಕೆ ಇಟ್ಟಿವೆ? ಇದೀಗ ಯಾತ್ರೆ ಮೂಲಕ ಜನರ ಭಾವನೆ ಜೊತೆಗೆ ಚೆಲ್ಲಾಟ ಆಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಪಂಕಜಾ, ಮಂಜುನಾಥ್, ಮಮತಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.