ADVERTISEMENT

ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ಸೂಚನೆ

ಡಿ.5 ರಿಂದ ಜಿಲ್ಲೆಯಾದ್ಯಂತ ಅಭಿಯಾನ: ಮಕ್ಕಳಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 14:45 IST
Last Updated 3 ಡಿಸೆಂಬರ್ 2022, 14:45 IST
ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜೆಇ ಲಸಿಕಾ ಪೋಸ್ಟರ್‌ ಅನ್ನು ಜಿಲ್ಲಾಧಿಕಾರಿ ಅರ್ಚನಾ ಎಂ.ಎಸ್‌. ಬಿಡುಗಡೆ ಮಾಡಿದರು.
ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜೆಇ ಲಸಿಕಾ ಪೋಸ್ಟರ್‌ ಅನ್ನು ಜಿಲ್ಲಾಧಿಕಾರಿ ಅರ್ಚನಾ ಎಂ.ಎಸ್‌. ಬಿಡುಗಡೆ ಮಾಡಿದರು.   

ಹಾಸನ: ಮಕ್ಕಳಲ್ಲಿ ಮಿದುಳಿನ ಜ್ವರ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ 1 ರಿಂದ 15 ವರ್ಷದ ಎಲ್ಲ ಮಕ್ಕಳಿಗೆ ಜೆಇ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಬೇಕು. ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜೆಇ ಲಸಿಕಾ ಅಭಿಯಾನ ಕುರಿತು ಜಿಲ್ಲಾ ಮಟ್ಟದ ಜೆಇ ಲಸಿಕಾ ಚಾಲನಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಶಾಲೆಗಳಲ್ಲಿಯೂ 1 ರಿಂದ 10 ತರಗತಿಯ ಎಲ್ಲ ಮಕ್ಕಳಿಗೂ ಲಸಿಕೆ ನೀಡುವಂತೆ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಸೂಕ್ತ ನಿರ್ದೇಶನ ನೀಡಿ ಲಸಿಕಾ ಅಭಿಯಾನ ಯಶಸ್ವಿಗೊಳಿಸಬೇಕು. ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಜೆ.ಇ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಬೇಕು. ಪ್ರತಿ ಶಾಲೆಗಳಲ್ಲಿಯೂ ತರಗತಿವಾರು ಪೋಷಕರ ಸಭೆ ನಡೆಸಿ ಅಭಿಯಾನದ ಬಗ್ಗೆ ಮಾಹಿತಿ ನೀಡಬೇಕು ಎಂದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೂ 1 ರಿಂದ 6 ವರ್ಷದ ಎಲ್ಲ ಮಕ್ಕಳನ್ನು ಪಟ್ಟಿ ಮಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾರಣವನ್ನು ಹಮ್ಮಿಕೊಳ್ಳಬೇಕು. ಸಿಡಿಪಿಒಗಳು ಕಾರ್ಯಕ್ರಮದ ಅನುಷ್ಠಾನದ ಮೇಲ್ವಿಚಾರಣೆ ನಡೆಸಬೇಕು. 1 ರಿಂದ 6 ವರ್ಷದ ಎಲ್ಲ ಮಕ್ಕಳಿಗೆ ಲಸಿಕೆ ನೀಡುವಂತೆ ಕ್ರಮ ವಹಿಸಬೇಕು ಎಂದರು.

ವಸತಿ ಶಾಲೆಗಳಲ್ಲಿಯೂ 1 ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ ಹಾಕಲು ಸೂಕ್ತ ಕ್ರಮ ವಹಿಸಬೇಕು, ನಗರಸಭೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿಯೂ ಜೆಇ ಲಸಿಕಾ ಅಭಿಯಾನದ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಸ್ವಾಮಿ, ಆರ್‌ಸಿಎಚ್ ಅಧಿಕಾರಿ ಡಾ.ಚೇತನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್‌. ಪ್ರಕಾಶ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಸತೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.