ADVERTISEMENT

8 ಪಬ್ಲಿಕ್ ಶಾಲೆ ಆರಂಭ

ಹೊಳೆನರಸೀಪುರಕ್ಕೆ ನಾಲ್ಕು ಶಾಲೆ ಮಂಜೂರು

​ಪ್ರಜಾವಾಣಿ ವಾರ್ತೆ
Published 23 ಜುಲೈ 2019, 20:30 IST
Last Updated 23 ಜುಲೈ 2019, 20:30 IST

ಹಾಸನ: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ರಾಜ್ಯದಲ್ಲ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ಮೊದಲ ಹಂತವಾಗಿ 250 ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತೀರ್ಮಾನಿಸಿದ್ದು, ಅದರಂತೆ ಜಿಲ್ಲೆಗೆ 8 ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರಾಗಿವೆ.

ಎಂಟು ಶಾಲೆಗಳ ಪೈಕಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರ ತವರು ಕ್ಷೇತ್ರ ಹೊಳೆನರಸೀಪುರಕ್ಕೆ 4 ಶಾಲೆಗಳು ಮಂಜೂರಾಗಿರುವುದು ವಿಶೇಷ.

ADVERTISEMENT

ಉಳಿದಂತೆ ಹಾಸನ ನಗರ ವ್ಯಾಪ್ತಿಗೆ 2, ಗ್ರಾಮೀಣ ಭಾಗಕ್ಕೆ 1 ಮತ್ತು ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಒಂದು ಶಾಲೆ ತೆರೆಯಲು ಅನುಮತಿ ನೀಡಲಾಗಿದೆ.

ಹಾಸನ ತಾಲ್ಲೂಕು ಸಂತೇಪೇಟೆ ಸರ್ಕಾರಿ ಜೂನಿಯರ್ ಕಾಲೇಜು, ಚಿಪ್ಪಿನಕಟ್ಟೆ ಸರ್ಕಾರಿ ಪದವಿ ಪೂರ್ವ ಕಾಲೇಜು,ಗಂಧದ ಕೋಠಿಯಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜು, ಹೊಳೆನರಸೀಪುರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ಸೋಮನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಶಾಂತಿಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಪಬ್ಲಿಕ್ ಶಾಲೆಗಳು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿವೆ.

ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಗರ, ಪಟ್ಟಣ ಮತ್ತು ಹೋಬಳಿ ಕೇಂದ್ರ ಸ್ಥಾನಗಳಲ್ಲಿ ಸ್ಥಾಪಿಸಿ, ಈ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ 12 ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡುವುದು ಇದರ ಉದ್ದೇಶವಾಗಿದೆ. ಸದರೀ ಶಾಲೆಗಳಿಗೆ ಕೇಂದ್ರೀಯ ವಿದ್ಯಾಲಯದ ಮಾದರಿಯಲ್ಲಿ ಪ್ರತ್ಯೇಕ ಸಂಘಟನೆ ಹಾಗೂ ಮಾರ್ಗಸೂಚಿ ನಿಗದಿಪಡಿಸಲಾಗಿದೆ.

‘ಷರತ್ತು ಹಾಗೂ ನಿಯಮಗಳನ್ನು ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸುವ ಸಮಯದಲ್ಲಿಯೂ ಚಾಚು ತಪ್ಪದೇ ಪಾಲಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವಿಶೇಷಾಧಿಕಾರಿ ಎಸ್.ಆರ್.ಎಸ್. ನಾಧನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.