ADVERTISEMENT

ಅತಿಸಾರ ಭೇದಿ; ಜಿಂಕ್ ಮಾತ್ರೆ ಉಚಿತವಾಗಿ ವಿತರಿಸಿ

ಭೇದಿಯಿಂದ ಸಾವಿಗೀಡಾಗುವ ಮಕ್ಕಳ ಸಂಖ್ಯೆ ಶೂನ್ಯಕ್ಕೆ ಇಳಿಸಿ: ಡಿಸಿ

​ಪ್ರಜಾವಾಣಿ ವಾರ್ತೆ
Published 17 ಮೇ 2019, 14:15 IST
Last Updated 17 ಮೇ 2019, 14:15 IST
ಹಾಸನದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ಹಾಸನದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.   

ಹಾಸನ: ಅತಿಸಾರ ಭೇದಿಯಿಂದ ಸಾವಿಗೀಡಾಗುವ ಮಕ್ಕಳ ಸಂಖ್ಯೆ ಶೂನ್ಯಕ್ಕಿಳಿಸಲು ಪರಿಣಾಮಕಾರಿ ಕ್ರಮ ಕೈಗೊಂಡು ಸೂಕ್ತ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದರು.

ಅತಿಸಾರ ಭೇದಿಯ ತೀವ್ರತರ ನಿಯಂತ್ರಣ ಪ್ರಾಕ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ವರ್ಷದ 1,28,096 ಮಕ್ಕಳನ್ನು ಗುರುತಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಓಆರ್ ಎಸ್ ಪೊಟ್ಟಣ ವಿತರಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಎಲ್ಲಾ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಹೇಗೆ ಕೈಯನ್ನು ಶುಚಿಗೊಳಿಸಬೇಕು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಬೇಕು ಎಂದರು.

ADVERTISEMENT

ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಓಆರ್ ಎಸ್ ಜೊತೆಗೆ ಜಿಂಕ್ ಮಾತ್ರೆಗಳನ್ನು ಉಚಿತವಾಗಿ ವಿತರಿಸಬೇಕು ಹಾಗೂ ಅರಿವು ಮೂಡಿಸಲು ಜಿಂಕ್ ಕಾರ್ನರ್ ಸ್ಥಾಪಿಸುವುದು ಸೂಕ್ತ ಎಂದು ಪ್ರಿಯಾಂಕಾ ಅಭಿಪ್ರಾಯಪಟ್ಟರು.

ಆರೋಗ್ಯ ಇಲಾಖೆ ಸಿಬ್ಬಂದಿ ಮುಂದಿನ 15 ದಿನ ಸಾರ್ವಜನಿಕ ಕುಡಿಯುವ ನೀರಿನ ಸಂಗ್ರಹಗಳ ಸ್ವಚ್ಛತೆ ಮಾಡಿರುವ ಬಗ್ಗೆ ಪರಿಶೀಲಿಸಬೇಕು. ಶಾಲೆಗಳಲ್ಲಿ ಇರುವ ಕುಡಿಯುವ ನೀರಿನ ತೊಟ್ಟಿಗಳನ್ನು ಆಗಾಗ್ಗೆ ಶುಚಿಗೊಳಿಸಲು ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಆರ್.ಸಿ.ಎಚ್ ಅಧಿಕಾರಿ ಡಾ. ಜನಾರ್ಧನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಾಪಬೋವಿ ಹಾಗೂ ವೈದ್ಯಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.