ADVERTISEMENT

ಅ.30ರಂದು ಹಾಸನದಲ್ಲಿ ಉದ್ಯೋಗ ಮೇಳ

ಪೂರ್ವಭಾವಿ ಸಭೆಯಲ್ಲಿ ಸಂಸದ ಶ್ರೇಯಸ್‌ ಪಟೇಲ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 4:32 IST
Last Updated 12 ಸೆಪ್ಟೆಂಬರ್ 2025, 4:32 IST
ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಇಂಡಿಯಾ ಸ್ಕಿಲ್ಸ್-2025ರ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಇಂಡಿಯಾ ಸ್ಕಿಲ್ಸ್-2025ರ ಪೋಸ್ಟರ್ ಬಿಡುಗಡೆ ಮಾಡಲಾಯಿತು.   

ಪ್ರಜಾವಾಣಿ ವಾರ್ತೆ

ಹಾಸನ: ಜಿಲ್ಲೆಯ ಯುವ ಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಅ.30ರಂದು ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜನೆ ಮಾಡಲಾಗುತ್ತಿದ್ದು, ಅಗತ್ಯ ಸಿದ್ಧತೆಗೆ ಕ್ರಮ ಕೈಗೊಳ್ಳುವಂತೆ ಸಂಸದ ಶ್ರೇಯಸ್ ಪಟೇಲ್, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಉದ್ಯೋಗ ಮೇಳ ಕುರಿತು ಅಧಿಕಾರಿಗಳೊಂದಿಗೆ ಪೂರ್ವ ಸಿದ್ದತಾ ಸಭೆ ನಡೆಸಿದ ಅವರು, ಯುವ ಜನತೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಿಂದಲೂ ಪ್ರಚಾರ ನೀಡಬೇಕು ಎಂದರು.

ADVERTISEMENT

ಉದ್ಯೋಗ ಮೇಳದ ಕುರಿತು ಎಲ್ಲೆಡೆ ಮಾಹಿತಿಗಾಗಿ ಪೋಸ್ಟರ್‌ಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳುವಂತೆ ಅರಿವು ಮೂಡಿಸಿ ಎಂದು ತಿಳಿಸಿದರು.

ಎಸ್.ಎಸ್‌.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ವ್ಯಾಸಂಗ ಮಾಡಿರುವವರಿಗೂ ಉದ್ಯೋಗ ಕಲ್ಪಿಸಲು ಹೆಚ್ಚಿನ ಉದ್ಯೋಗದಾತ ಕಂಪನಿಗಳನ್ನು ಆಹ್ವಾನಿಸಬೇಕು. ತಾಲ್ಲೂಕು ಮಟ್ಟದಲ್ಲಿಯೂ ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಭೆ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಅರಿವು ಮೂಡಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಕೃಷಿ ಪ್ರಧಾನವಾದ ಜಿಲ್ಲೆ ಆಗಿರುವುದರಿಂದ ಕೃಷಿಗೆ ಒತ್ತು ನೀಡುವ ಕಂಪನಿಗಳನ್ನು ಉದ್ಯೋಗ ಮೇಳಕ್ಕೆ ಆಹ್ವಾನಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಬಿ.ಆರ್. ಪೂರ್ಣಿಮಾ ಮಾತನಾಡಿ, ಗ್ರಾಮ ಪಂಚಾಯಿತಿ ಹಂತದಲ್ಲಿ ಹೆಚ್ಚಿನ ಪ್ರಚಾರ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಹೆಚ್ಚಿನ ಯುವಜನತೆ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಉತ್ತೇಜಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉದ್ಯೋಗಾಧಿಕಾರಿ ವಿಜಯಲಕ್ಷ್ಮಿ, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.