ದೊಡ್ಡತಪ್ಪಲೆ ಬಳಿ ಸಂಭವಿಸಿರುವ ಭೂಕುಸಿತ
ಸಕಲೇಶಪುರ (ಹಾಸನ): ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮಂಗಳವಾರ ಮಧ್ಯಾಹ್ನ ಮತ್ತೆ ಭಾರೀ ಪ್ರಮಾಣದ ಭೂಕುಸಿತವಾಗಿದ್ದು, ಒಂದು ಟ್ಯಾಂಕರ್, ಲಾರಿ ಉರುಳಿ ಬಿದ್ದಿವೆ.
ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣಿನಡಿ ಸಿಲುಕಿವೆ. ಸತತ ಮಳೆಯಿಂದಾಗಿ ಈ ಪ್ರದೇಶದಲ್ಲಿ ನಿರಂತರವಾಗಿ ಬೆಟ್ಟದ ಮಣ್ಣು ಕುಸಿಯುತ್ತಲೇ ಇದ್ದು, ಆಗಾಗ ಮಣ್ಣು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿತ್ತು.
ವಾಹನಗಳು ಸಂಚರಿಸುತ್ತಿರುವಾಗಲೇ ಮಂಗಳವಾರ ಮಧ್ಯಾಹ್ನ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಕೆಲ ಪ್ರಯಾಣಿಕರು ಕಾರಿನಲ್ಲೇ ಸಿಲುಕಿದ್ದಾರೆ. ಆದರೆ, ಯಾರಿಗೂ ಅಪಾಯವಾಗಿಲ್ಲ. ಹಿಟಾಚಿ, ಜೆಸಿಬಿ ಮೂಲಕ ಮಣ್ಣು ತೆರವು ಮಾಡಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣ ಮಣ್ಣು ಕುಸಿದಿದ್ದರೆ, ದೊಡ್ಡ ಅನಾಹುತ ಸಂಭವಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಸ್ತೆಗೆ ಬಿದ್ದಿರುವ ಮಣ್ಣು ಹಾಗೂ ವಾಹನಗಳನ್ನು ತೆರವುಗೊಳಿಸುವವರೆಗೆ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಚಾರ ದಟ್ಟಣೆಯಲ್ಲಿ ಸಿಲುಕಿರುವ ಪ್ರಯಾಣಿಕರು ಪರದಾಡುವಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.