ಹಾಸನ: ಇಂದಿನ ಸ್ಪರ್ಧಾತ್ಮಕ ಯುಗದ ತಾಂತ್ರಿಕ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳು ಕಂಡು ಬರುತ್ತಿವೆ. ಹೊಸ ಆವಿಷ್ಕಾರಗಳು ನಿತ್ಯ ನಡೆಯುತ್ತಲೇ ಇವೆ. ಇದನ್ನು ಅರಿತುಕೊಂಡು ವಿದ್ಯಾರ್ಥಿಗಳು ಹಾಗೂ ಪದವೀಧರರು ನಿರಂತರ ಕಲಿಕೆಯಿಂದ ತಮ್ಮ ಜ್ಞಾನಾರ್ಜನೆ ಮಾಡಿಕೊಂಡು ಸ್ಪರ್ಧಾ ಲೋಕಕ್ಕೆ ಕಾಲಿರಿಸಬೇಕು ಎಂದು ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಪತಿ ಡಾ. ಆನಂದ್ ಶಾರದ ದೇಶಪಾಂಡೆ ತಿಳಿಸಿದರು.
ನಗರದ ರಾಜೀವ್ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಪವನಪುತ್ರ ಕನ್ವೆನ್ಷನ್ ಹಾಲ್‍ನಲ್ಲಿ ಆಯೋಜಿಸಿದ್ದ 14ನೇ ಪದವಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಪದವೀಧರರಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.
ಪದವೀಧರರು ತಮ್ಮ ವೃತ್ತಿ ಕ್ಷೇತ್ರದಲ್ಲಿ ಹಾಗೂ ಗೆಳೆಯರ ಬಳಗದಲ್ಲಿ ಉತ್ತಮ ಸಂಪರ್ಕ ಇಟ್ಟುಕೊಂಡು, ಜಗತ್ತಿನ ಎಲ್ಲ ಭಾಗಗಳಲ್ಲಿ ಆಗುತ್ತಿರುವ ತಂತ್ರಜ್ಞಾನದ ಸಂಶೋಧನೆಗಳ ಬಗ್ಗೆ ಮಾಹಿತಿ ಕಲೆ ಹಾಕಿ. ನಿಮ್ಮ ಬುದ್ಧಿಶಕ್ತಿಯಿಂದ ಹಲವು ಆಯಾಮಗಳಲ್ಲಿ ಅದರತ್ತ ಯೋಚಿಸಿ. ಆಗ ನಿಮ್ಮ ಮುಂದೆ ಅವಕಾಶಗಳು ತೆರೆದುಕೊಳ್ಳುತ್ತವೆ. ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸೃಷ್ಟಿಸಿಕೊಂಡು ವೈಯಕ್ತಿಕ ಬದುಕು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಡಾ.ಬಿ.ಎನ್. ರತ್ನಾ, ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ಉಜ್ವಲ ಭವಿಷ್ಯಕ್ಕೆ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಪಿ.ಕೆ. ಸ್ವಾಗತಿಸಿದರು. ಸಂಸ್ಥೆಯ ಉಪಾಧ್ಯಕ್ಷ ಡಾ. ರಂಜಿತ್ ರಾಜೀವ್, ಎಲ್ಲ ವಿಭಾಗಗಳ ಡೀನ್‍ಗಳು, ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.