ಹಾಸನ: ಜಿಲ್ಲೆಯಲ್ಲಿ 2024-2025 ನೇ ಸಾಲಿನಲ್ಲಿ ಕೇವಲ 7 ಕುಷ್ಠರೋಗಿಗಳು ಕಂಡು ಬಂದಿದ್ದು, ಹರಡುವಿಕೆಯ ಪ್ರಮಾಣವು ಶೇ 0.04 ರಷ್ಟಾಗಿದೆ. ರಾಜ್ಯದಲ್ಲಿ ಅತೀ ಕಡಿಮೆ ಪ್ರಕರಣಗಳುಳ್ಳ ಜಿಲ್ಲೆಗಳಲ್ಲಿ ಹಾಸನ ಜಿಲ್ಲೆಯು 3 ನೇ ಸ್ಥಾನದಲ್ಲಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ನಾಗೇಶ್ ಪಿ. ಆರಾಧ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಮತ್ತು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಕಚೇರಿಯ ಆಶ್ರಯದಲ್ಲಿ ಬಿ.ಸಿ.ರಾಯ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಆಂದೋಲನದ-ಪಾಕ್ಷಿಕ ಆಚರಣೆಯಲ್ಲಿ ಮಾತನಾಡಿದ ಅವರು, ಎಲ್ಲ 7 ಕುಷ್ಠರೋಗಿಗಳಿಗೂ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಘೋಷ ವಾಕ್ಯವಾದ ‘ಒಟ್ಟಾಗಿ ನಾವು ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ’, ‘ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೋಣ’ ಎಂದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮಗಳ ರೂಪರೇಷೆಗಳ ಬಗ್ಗೆ ತಿಳಿಸಿದರು.
ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನವರಿ 30ರಿಂದ ಫೆಬ್ರುವರಿ 13ರವರೆಗೆ ಜಾಗೃತಿ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು.
ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಶಿವಶಂಕರ್ ಕೆ.ಬಿ., ಕುಷ್ಠರೋಗವನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚುವುದರಿಂದ ಮುಂದಿನ ತೊಂದರೆ ಹಾಗೂ ಅಂಗವಿಕಲತೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಸಾಧ್ಯತೆ ಬಗ್ಗೆ ತಿಳಿಸಿದರು.
ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಿಬ್ಬಂದಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಕಚೇರಿಯ ಸಿಬ್ಬಂದಿ, ಎಲ್ಲ ತಾಲ್ಲೂಕಿನ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.