ಹಾಸನ: ‘ಜಿಲ್ಲಾ ವ್ಯಾಪ್ತಿಯ ಎಲ್ಲ ಬ್ಯಾಂಕ್‌ಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ಮತ್ತು ಚಲನ್‌ಗಳು ಕನ್ನಡದಲ್ಲಿ ಇರಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಲೀಡ್ ಬ್ಯಾಂಕ್ ಅಧಿಕಾರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ. ಮನು ಕುಮಾರ್ ಮಾತನಾಡಿ, ‘ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಯಂತೆ ಬ್ಯಾಂಕ್‌ನಲ್ಲಿ ಕನ್ನಡ ಭಾಷೆ ಬಳಕೆ ಮಾಡುತ್ತಿಲ್ಲ. ಇದರಿಂದ ಗ್ರಾಮೀಣ ಭಾಗದ ಹಾಗೂ ಇತರೆ ಗ್ರಾಹಕರಿಗೆ ವ್ಯವಹರಿಸಲು ತೊಂದರೆಯಾಗಿದೆ’ ಎಂದು ದೂರಿದರು.
‘ಸಾರ್ವಜನಿಕರಿಗೆ ಉತ್ತಮ ಸೇವೆ ಸಿಗುತ್ತಿಲ್ಲ. ಆಸನಗಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಾಗಿದೆ. ಕಡ್ಡಾಯವಾಗಿ ಎಲ್ಲ ಸೌಲಭ್ಯದೊಂದಿಗೆ ಕನ್ನಡ ಭಾಷೆಯಲ್ಲಿ ವ್ಯವಹರಿಸುವ ನಿಟ್ಟಿನಲ್ಲಿ ಆಯಾ ಬ್ಯಾಂಕ್ ಶಾಖೆಯ ಮುಖ್ಯಸ್ಥರು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
‘ನಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.
ವೇದಿಕೆಯ ನಗರ ಘಟಕದ ಅಧ್ಯಕ್ಷ ಶಿವಕುಮಾರ್, ಶಶಾಂಕ್, ಪ್ರೀತಂ ರಾಜ್, ಅಭೀಗೌಡ, ಆಲ್ವಿನ್, ಬೋರೇಗೌಡ, ಶ್ರೀಶಾಂತ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.