
ಹಾಸನ: ಜಿಲ್ಲೆಯಲ್ಲಿ ಶಾಲಾ– ಕಾಲೇಜುಗಳ ವಿದ್ಯಾರ್ಥಿಗಳ ಸುರಕ್ಷತೆ, ದೈಹಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸಮಗ್ರ ಕ್ರಿಯಾ ಯೋಜನೆ ತಯಾರಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ಮಾನಸಿಕ ಸ್ವಾಸ್ಥ್ಯ ಕಾಪಾಡಲು ಶಿಕ್ಷಕರು, ಪೋಷಕರು, ಸ್ವ ಸಹಾಯ ಸಂಘ– ಸಂಸ್ಥೆಗಳು ಕೈಜೋಡಿಸಬೇಕು ಎಂದರು.
ಖಾಸಗಿ ಆಸ್ಪತ್ರೆಗಳು, ಸ್ಕೌಟ್ ಮತ್ತು ಗೈಡ್ಸ್, ಲಯನ್ಸ್ ಕ್ಲಬ್, ರೋಟರಿ ಕ್ಲಬ್ ಹಾಗೂ ಮತ್ತಿತರ ಸಂಘ–ಸಂಸ್ಥೆಗಳನ್ನು ಬಳಸಿಕೊಂಡು ಕ್ರಿಯಾತ್ಮಕವಾಗಿ ಜಾಗೃತಿ ಮೂಡಿಸಸಬೇಕು. ಮಕ್ಕಳಿಗೆ ಪರೀಕ್ಷಾ ಭಯ ನಿವಾರಣೆ ಮಾಡುವುದರ ಜೊತೆಗೆ ಪರೀಕ್ಷಾ ಸಿದ್ಧತೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಒದಗಿಸಬೇಕು. ರಾಷ್ಟ್ರೀಯ ಆತ್ಮಹತ್ಯೆ ತಡೆ ಬಗ್ಗೆಯೂ ಸಂಪನ್ಮೂಲ ವ್ಯಕ್ತಿಗಳಿಂದ ಸೆಮಿನಾರ್ ಆಯೋಜಿಸುವ ಮೂಲಕ ಅರಿವು ಮೂಡಿಸಲು ನಿರ್ದೇಶನ ನೀಡಿದರು.
ನೂರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರುವ ಶಾಲಾ– ಕಾಲೇಜುಗಳಲ್ಲಿ ಸಮಾಲೋಚಕರನ್ನು ನೇಮಿಸಿಕೊಳ್ಳಬೇಕು. ತಾಲ್ಲೂಕುವಾರು ಪಟ್ಟಿ ಪಡೆಯಬೇಕು. ಎಲ್ಲ ಮಕ್ಕಳ ಮಾನಸಿಕ ಆರೋಗ್ಯ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ಸಮರ್ಪಕವಾಗಿ ಆಪ್ತ ಸಮಾಲೋಚನೆ ನಡೆಸುವ ಮೂಲಕ ಸಮಸ್ಯೆ ನಿವಾರಣೆಗೆ ಹೆಚ್ಚು ಒತ್ತು ನೀಡುವಂತೆ ತಿಳಿಸಿದರು.
ಶಾಲೆಗಳಲ್ಲಿ ಕ್ರೀಡಾ ಚಟುವಟಿಕೆಗಳಿಗೆ ವಾರಕ್ಕೆ ಎಷ್ಟು ಸಮಯ ನೀಡುತ್ತಿದ್ದಾರೆ ಎಂಬುದನ್ನು ಪರಿಶೀಲಿಸುವಂತೆ ತಿಳಿಸಿದರ ಅವರು, ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೋಷಕರ, ಪಾಲಕರ ಪಾತ್ರ ಮಹತ್ತರವಾಗಿದೆ ಎಂದರು.
ಕೋಚಿಂಗ್ ಸೆಂಟರ್‌ಗಳಲ್ಲಿ ಮಕ್ಕಳ ಮಾನಸಿಕ ಆರೋಗ್ಯಕ್ಕಾಗಿ ಏನೇನು ಕ್ರಮ ಕೈಗೊಂಡಿದ್ದಾರೆ ಎಂಬುದರ ಬಗ್ಗೆ ವರದಿ ಪಡೆಯುವಂತೆ ನಿರ್ದೇಶನ ನೀಡಿದ ಅವರು, ನೋಡಲ್ ಅಧಿಕಾರಿಯನ್ನು ನೇಮಿಸಿ ಅನುಪಾಲನಾ ವರದಿ ನೀಡುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಚಂದ್ರಮೌಳಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಲರಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕುಮಾರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಾಧರ್, ಇತರ ಅಧಿಕಾರಿಗಳು ಹಾಜರಿದ್ದರು.
ಮಕ್ಕಳು ಮಾನಸಿಕ ಒತ್ತಡ ಹೊರ ಹಾಕಲು ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಕಡ್ಡಾಯವಾಗಿ ಒಂದು ಮಗು– ಒಂದು ಕ್ರೀಡೆ ಕಲಿಯಲೇಬೇಕುಕೆ.ಎಸ್. ಲತಾಕುಮಾರಿ ಜಿಲ್ಲಾಧಿಕಾರಿ
ಆಡಳಿತ ಮಂಡಳಿಯವರಿಗೂ ತರಬೇತಿ ನೀಡಿ
ಶೈಕ್ಷಣಿಕ ಸಂಸ್ಥೆಗಳ ಬೋಧಕ ಬೋಧಕೇತರ ಸಿಬ್ಬಂದಿ ಆಡಳಿತ ಮಂಡಳಿಯವರಿಗೂ ಮಾನಸಿಕ ಆರೋಗ್ಯ ಕುರಿತು ಸಂವಹನ ತರಬೇತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಹೇಳಿದರು. ಶಾಲಾ-ಕಾಲೇಜುಗಳಲ್ಲಿ ರ‍್ಯಾಗಿಂಗ್‌ಗೆ ಮಕ್ಕಳು ಮಾನಸಿಕವಾಗಿ ಕುಗ್ಗುತ್ತಾರೆ. ರ‍್ಯಾಗಿಂಗ್ ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ಮುಖ್ಯಸ್ಥರು ಶಿಕ್ಷಕರು ಹಾಸ್ಟೆಲ್ ವಾರ್ಡನ್‍ಗಳಿಗೆ ಜವಾಬ್ದಾರಿ ನಿಗದಿಪಡಿಸಿ ಸುತ್ತೋಲೆ ಹೊರಡಿಸಬೇಕು. ಲೈಗಿಂಕ ದೌರ್ಜನ್ಯ ಕಿರುಕುಳ ತಡೆಯುವ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದರು. ಮಗುವಿನ ಮಾನಸಿಕ ಸ್ಥಿತಿ ಅರ್ಥ ಮಾಡಿಕೊಂಡು ಸರಿ–ತಪ್ಪುಗಳನ್ನು ತಿದ್ದಿ ತೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಈ ನಿಟ್ಟಿನಲ್ಲಿ ಸಮನ್ವಯ ಅಧಿಕಾರಿ ನೇಮಿಸಬೇಕು. ಶಾಲಾ– ಕಾಲೇಜುಗಳ ಆವರಣದಿಂದ ನಿಗದಿತ ದೂರದಲ್ಲಿ ಮಾದಕ ವಸ್ತುಗಳ ಮಾರಾಟ ನಿಷೇಧಿಸಲಾಗಿದ್ದು ಇದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಹಾಯವಾಣಿ 14416 ಪ್ರಚಾರ ಪಡಿಸಿ
ರಾಷ್ಟ್ರೀಯ ಮಾನಸಿಕ ಆರೋಗ್ಯ ಸಹಾಯವಾಣಿ ಸಂಖ್ಯೆ 14416 ಯ ಬಗ್ಗೆ ಪ್ರತಿಯೊಂದು ಶಾಲಾ– ಕಾಲೇಜುಗಳು ವಸತಿ ನಿಲಯಗಳು ಕೋಚಿಂಗ್ ಸೆಂಟರ್‌ಗಳಲ್ಲಿಯೂ ಕಡ್ಡಾಯವಾಗಿ ಫಲಕ ಅಳವಡಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ ನೀಡಿದರು. ಸಮಸ್ಯೆಗಳನ್ನು ಗಮನಿಸಿದಾಗ ಸಾರ್ವಜನಿಕರು ಮಾಹಿತಿ ಒದಗಿಸಲು ಸಹಕಾರಿ ಆಗುವಂತೆ ಈ ಸಂಖ್ಯೆಯ ಕುರಿತು ಹೆಚ್ಚಿನ ಪ್ರಚಾರ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ವೆಬ್‍ಸೈಟ್ ಸಾಮಾಜಿಕ ಜಾಲತಾಣ ಜಿಲ್ಲಾಧಿಕಾರಿ ಕಚೇರಿ ಜಿಲ್ಲಾ ಪಂಚಾಯಿತಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆವರಣದಲ್ಲಿರುವ ಬೋರ್ಡ್‌ನಲ್ಲಿಯೂ ಸಹಾಯವಾಣಿ ಸಂಖ್ಯೆ 14416 ಪ್ರಕಟಿಸುವಂತೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.