ADVERTISEMENT

ಆರೋಗ್ಯಕರ ಜೀವನಕ್ಕೆ ಸಿರಿಧಾನ್ಯ ಬಳಸಿ

ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 5:02 IST
Last Updated 24 ಜನವರಿ 2026, 5:02 IST
ಹಾಸನದಲ್ಲಿ ಶುಕ್ರವಾರ ಆಯೋಜಿಸಿದ್ದ ಜಾಗೃತಿ ಜಾಥಾದ ಅಂಗವಾಗಿ ಎತ್ತಿನಗಾಡಿಯಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅರಿವು ಮೂಡಿಸಿದರು
ಹಾಸನದಲ್ಲಿ ಶುಕ್ರವಾರ ಆಯೋಜಿಸಿದ್ದ ಜಾಗೃತಿ ಜಾಥಾದ ಅಂಗವಾಗಿ ಎತ್ತಿನಗಾಡಿಯಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅರಿವು ಮೂಡಿಸಿದರು   

ಹಾಸನ: ಆರೋಗ್ಯಕರ ಜೀವನದ ಮೂಲ ಸಿರಿಧಾನ್ಯ ಮತ್ತು ಸಾವಯವ ಆಹಾರದಲ್ಲೇ ಇದೆ. ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಬಳಕೆಯಿಂದ ಆರೋಗ್ಯಕರ ಜೀವನ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ವಿಷಯುಕ್ತ ಆಹಾರ ಪದಾರ್ಥಗಳು ಮನುಷ್ಯನ ದೇಹ ಸೇರುತ್ತಿವೆ. ಅವುಗಳನ್ನು ನಿಯಂತ್ರಿಸದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.

ADVERTISEMENT

ಕೃಷಿ ಕ್ಷೇತ್ರವು ಉದ್ಯಮವಾಗಿ ಮಾರ್ಪಟ್ಟಿದೆ. ಇದರ ನಡುವೆ ಸಾವಯವ ಕೃಷಿ ಹಾಗೂ ಗುಣಮಟ್ಟದ ಆಹಾರ ಪದಾರ್ಥಗಳ ಬಳಕೆ ಸವಾಲಿನ ಕೆಲಸ. ಈ ನಿಟ್ಟಿನಲ್ಲಿ ಸಾವಯವ ಕೃಷಿ ಹಾಗೂ ಸಾವಯವ ಉತ್ಪನ್ನಗಳು ಮತ್ತು ಸಿರಿ ಧಾನ್ಯಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಸಿರಿಧಾನ್ಯ ಬಳಕೆ, ಸಾವಯವ ಕೃಷಿ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಾಥಾ ಆಯೋಜಿಸಲಾಗಿದೆ. ಸಾವಯವ ಕೃಷಿಗೆ ಉತ್ತೇಜನ ನೀಡಲು ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ಸಾಕಷ್ಟು ಕಾರ್ಯಕ್ರಮಗಳಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಸಾಧ್ಯವಾದಷ್ಟು ಸಾವಯವ ಕೃಷಿಗೆ ಒತ್ತು ನೀಡಿ, ಸಿರಿ ಧಾನ್ಯಗಳ ಬಳಕೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ಹಾಗೂ ಉತ್ತಮ ಮಾರ್ಕೆಟ್ ವ್ಯವಸ್ಥೆ ಕಲ್ಪಿಸುವುದು ಅವಶ್ಯಕ. ಸರ್ಕಾರ ಮಾತ್ರವಲ್ಲದೇ ಪ್ರತಿಯೊಬ್ಬ ನಾಗರಿಕರೂ ಸಾವಯವ ಉತ್ಪನ್ನಗಳನ್ನು ಬಳಸುವ ಮೂಲಕ ರೈತರನ್ನು ಪ್ರೋತ್ಸಾಹಿಸಬೇಕು. ಇದರಿಂದ ರೈತರ ಬದುಕು ಸುಧಾರಿಸುವುದರ ಜೊತೆಗೆ ಸಾರ್ವಜನಿಕರ ಆರೋಗ್ಯವೂ ಉತ್ತಮವಾಗುತ್ತದೆ ಎಂದು ಹೇಳಿದರು.

ನಂತರ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಎತ್ತಿನಗಾಡಿಯಲ್ಲಿ ಸಾಗುವ ಮೂಲಕ ಜಾಗೃತಿ ಜಾಥಾದ ಮೆರುಗು ಹೆಚ್ಚಿಸಿದರು. ಜಿಲ್ಲಾ ಕ್ರೀಡಾಂಗಣದಿಂದ ಹೊರಟ ಜಾಥಾ, ಸಾಲಗಾಮೆ ರಸ್ತೆಯ ಮೂಲಕ ಮಹಾರಾಜ ಪಾರ್ಕ್, ಹೇಮಾವತಿ ಪ್ರತಿಮೆ ಮುಂಭಾಗದವರೆಗೆ ಸಾಗಿತು. ಬಿಳಿ ಬಣ್ಣದ ಟೀ ಶರ್ಟ್ ತೊಟ್ಟ ನೂರಾರು ಮಂದಿ ಭಾಗಿಯಾಗಿದ್ದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್‌ಕುಮಾರ್‌, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್, ರೈತ ಸಂಘದ ಮುಖಂಡ ಕಣಗಾಲ ಮೂರ್ತಿ, ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಬಿ. ಮದನಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಜೆ.ಬಿ. ಕೆಂಚೇಗೌಡ, ಸಕಲೇಶಪುರ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್, ಯುವಜನ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು, ಹಾಸನ ಆಕಾಶವಾಣಿ ಮಧುಸೂದನ್ ಸೇರಿದಂತೆ ಅಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಹಾಸನದಲ್ಲಿ ಶುಕ್ರವಾರ ಆಯೋಜಿಸಿದ್ದ ಜಾಗೃತಿ ಜಾಥಾದ ಅಂಗವಾಗಿ ಎತ್ತಿನಗಾಡಿಯಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅರಿವು ಮೂಡಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.