ADVERTISEMENT

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೌಲಭ್ಯ ಪಡೆದುಕೊಳ್ಳಿ: ಕಲ್ಲೇಶ್

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2025, 2:54 IST
Last Updated 8 ನವೆಂಬರ್ 2025, 2:54 IST
ಕೊಣನೂರು ಹೋಬಳಿಯ ಮರಿಯಾನಗರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ಕಲ್ಲೇಶ್ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ನೀಡಿದರು 
ಕೊಣನೂರು ಹೋಬಳಿಯ ಮರಿಯಾನಗರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ಕಲ್ಲೇಶ್ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ನೀಡಿದರು    

ಕೊಣನೂರು: ಪ್ರತಿ ವರ್ಷ ನವೆಂಬರ್ 11ರಂದು ದೇಶದ ಮೊದಲ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವಾಗಿ ಆಚರಿಸುವಂತೆ ಇಲಾಖೆಯ ಆದೇಶದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲೆಗಳಲ್ಲಿ ಆಚರಿಸಲಾಗುತ್ತದೆ ಎಂದು ತಾಲ್ಲೂಕು ವಿಸ್ತರಣಾಧಿಕಾರಿ ಕಲ್ಲೇಶ್ ತಿಳಿಸಿದರು.

ಹೋಬಳಿಯ ಮರಿಯಾನಗರದಲ್ಲಿ ಅಲ್ಪಸಂಖ್ಯಾತರಿಗಾಗಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು 1 ನೇ ತರಗತಿಯಿಂದ 8ನೇ ತರಗತಿ ಮತ್ತು ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವಿದ್ಯಾರ್ಥಿ ವೇತನ, ವಿದೇಶದಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.

ಹಿಂದುಳಿದಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ₹50 ಸಾವಿರ ನೀಡುವ ಕಾರ್ಯಕ್ರಮವನ್ನು ನಿರ್ದೇಶನಾಲಯದಿಂದ ಅನುಷ್ಠಾನಗೊಳಿಸಲಾಗಿದ್ದು ಇದರ ಪ್ರಯೋಜನಗಳನ್ನು ಪಡೆದುಕೊಳ್ಳಲು ಸಲಹೆ ನೀಡಿದರು.

ADVERTISEMENT

ವಿವಾಹದ ವೆಚ್ಚ ಪಡೆಯುವವರು ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್ ಸಿಖ್, ಬೌದ್ಧ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು. ಈ ಯೋಜನಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ₹2.50 ಲಕ್ಷ ಮತ್ತು ಒಟ್ಟಾರೆಯಾಗಿ ₹5 ಲಕ್ಷ ಮೀರತಕ್ಕದ್ದಲ್ಲ. ಈ ಸೌಲಭ್ಯವು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ.

ಜಿಲ್ಲಾ ನೋಂದಣಿ/ ವಕ್ಸ್ ಬೋರ್ಡ್‌ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್‌ಗಳು ದೇವಸ್ಥಾನದ ಟ್ರಸ್ಟ್‌ಗಳು, ಸಂಘಗಳು, ಸೊಸೈಟಿಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ದತ್ತಾಂಶ ನಿರ್ವಾಹಕ ಸಲ್ಲಾವುದ್ದಿನ್, ಮಾಹಿತಿ ಅಧಿಕಾರಿ ಕೆ.ಶಿವಣ್ಣ ಮತ್ತು ಮುಖ್ಯ ಶಿಕ್ಷಕಿ ಸೇಲಸ್ಟಿನಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.