ADVERTISEMENT

ಚನ್ನಪಟ್ಟಣ: ಬಸ್ ನಿಲ್ದಾಣಕ್ಕೆ ಶಾಸಕ ಸ್ವರೂಪ್‌ ಪ್ರಕಾಶ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 13:06 IST
Last Updated 17 ಜೂನ್ 2025, 13:06 IST
ಹಾಸನದ ಕೇಂದ್ರ ಬಸ್ ನಿಲ್ದಾಣಕ್ಕೆ ಮಂಗಳವಾರ ಭೇಟಿ ನೀಡಿದ ಶಾಸಕ ಸ್ವರೂಪ್‌ ಪ್ರಕಾಶ್‌, ಪ್ರಯಾಣಿಕರ ಜೊತೆ ಚರ್ಚಿಸಿದರು 
ಹಾಸನದ ಕೇಂದ್ರ ಬಸ್ ನಿಲ್ದಾಣಕ್ಕೆ ಮಂಗಳವಾರ ಭೇಟಿ ನೀಡಿದ ಶಾಸಕ ಸ್ವರೂಪ್‌ ಪ್ರಕಾಶ್‌, ಪ್ರಯಾಣಿಕರ ಜೊತೆ ಚರ್ಚಿಸಿದರು    

ಹಾಸನ: ನಗರದ ಚನ್ನಪಟ್ಟಣದಲ್ಲಿರುವ ಕೆಎಸ್ಆರ್‌ಟಿಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ ಹಾಗೂ ಇನ್ನಿತರ ಮೂಲಸೌಕರ್ಯಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸ್ ನಿಲ್ದಾಣಕ್ಕೆ ಬರುವ ಬಸ್‌ಗಳಿಗೆ ವ್ಯವಸ್ಥಿತವಾಗಿ ನಿಲುಗಡೆಗೆ ಸೂಚನೆ ನೀಡಬೇಕು. ಖಾಸಗಿ ವಾಹನಗಳು ಬಸ್ ನಿಲ್ದಾಣದ ಒಳಗೆ ಬಾರದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಬಸ್ ನಿಲ್ದಾಣದ ಪಕ್ಕದಲ್ಲಿರುವ ರಾಜಕಾಲುವೆಯಿಂದ ದುರ್ವಾಸನೆ ಬರುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇದೆ. ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜಕಾಲುವೆ ಮೇಲೆ ಸ್ಲ್ಯಾಬ್ ಅಳವಡಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಬಸ್ ನಿಲ್ದಾಣದ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚ’ ಎಂದು ನಗರಸಭೆ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಸೂಚನೆ ನೀಡಿದರು.

ADVERTISEMENT

‘ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಜೊತೆಗೆ ಶೌಚಾಲಯಗಳನ್ನು ಕೂಡ ಶುಚಿಯಾಗಿ ಇಟ್ಟುಕೊಳ್ಳಬೇಕು. ಬಸ್ ನಿಲ್ದಾಣದಲ್ಲಿರುವ ಅಂಗಡಿಗಳ ವರ್ತಕರು, ನಿಗದಿತ ದರಕ್ಕಿಂತ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುತ್ತಿದ್ದರೆ, ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಸ್ ನಿಲ್ದಾಣದ ಸುತ್ತಮುತ್ತ ಗಿಡಗಂಟಿಗಳು ಬೆಳೆದಿದ್ದರೆ ಅವುಗಳನ್ನು ತೆರವು ಮಾಡಿ ಉತ್ತಮ ವಾತಾವರಣ ನಿರ್ಮಿಸಬೇಕು’ ಎಂದು ತಾಕೀತು ಮಾಡಿದರು.

ಇದೆ ವೇಳೆ ಬಸ್ ನಿಲ್ದಾಣದ ಪಕ್ಕದಲ್ಲಿನ ಆಟೊ ಚಾಲಕರು ಕೂಡ, ಪ್ರಯಾಣಿಕರು ಆಟೊ ನಿಲ್ದಾಣದ ಪಕ್ಕದಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ತೊಂದರೆಯಾಗುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಪರಿಹಾರ ಕಲ್ಪಿಸಿ ಕೊಡುವಂತೆ ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಶಾಸಕ ಸ್ವರೂಪ ಸೂಚನೆ ನೀಡಿದರು‌.

ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್‌, ಜೆಡಿಎಸ್ ಜಿಲ್ಲಾ ವಕ್ತಾರ ಹೊಂಗೆರೆ ರಘು, ಅಧಿಕಾರಿಗಳು, ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.