ADVERTISEMENT

ಹಾಸನ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಬಿರುಸು

ಹೇಮಾವತಿ ನದಿಗೆ ಹೆಚ್ಚಿದ ಒಳಹರಿವು: ಹೆದ್ದಾರಿ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿತ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 13:48 IST
Last Updated 17 ಜೂನ್ 2025, 13:48 IST
ಹಾಸನದಲ್ಲಿ ಮಂಗಳವಾರ ಸುರಿಯುತ್ತಿರುವ ಮಳೆಯಲ್ಲಿಯೇ ಕೊಡೆ ಹಿಡಿದು ವಿದ್ಯಾರ್ಥಿಗಳು ಶಾಲೆಗೆ ತೆರಳಿದರು.
ಹಾಸನದಲ್ಲಿ ಮಂಗಳವಾರ ಸುರಿಯುತ್ತಿರುವ ಮಳೆಯಲ್ಲಿಯೇ ಕೊಡೆ ಹಿಡಿದು ವಿದ್ಯಾರ್ಥಿಗಳು ಶಾಲೆಗೆ ತೆರಳಿದರು.   

ಹಾಸನ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಬಿರುಸುಗೊಂಡಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಪ್ರಮುಖವಾಗಿ ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳಲ್ಲಿ ಮಳೆ ಹೆಚ್ಚಾಗಿದೆ.

ಸಕಲೇಶಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಹೆದ್ದಾರಿ ಚತುಷ್ಪಥ ಕಾಮಗಾರಿ ಸ್ಥಳಗಳಲ್ಲಿ ಅಲ್ಲಲ್ಲಿ ಮಣ್ಣು ಕುಸಿಯುತ್ತಿದ್ದು, ಗಿಡಗಳು ನೆಲಕ್ಕೆ ಉರುಳಿವೆ. ದೊಡ್ಡತಪ್ಪಲೆ ಬಳಿ ಸೋಮವಾರ ರಾತ್ರಿ ಸ್ವಲ್ಪ ಪ್ರಮಾಣದ ಮಣ್ಣು ಕುಸಿತವಾಗಿದೆ.

ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಒಳಹರಿವು ಹೆಚ್ಚಾಗಿದೆ. 8 ಸಾವಿರ ಕ್ಯುಸೆಕ್‌ಗೂ ಅಧಿಕ ನೀರು ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2922 ಅಡಿ ಇದ್ದು, ಮಂಗಳವಾರ 2909 ಅಡಿ ನೀರು ಸಂಗ್ರಹವಾಗಿದೆ.

ADVERTISEMENT

ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮುಂದಿನ 3 ದಿನ ಗುಡುಗು ಸಿಡಿಲು, ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತ ರಾಮ್‌ಪ್ರಕಾಶ್‌ ತಿಳಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ (08172-261111/1077) ಅಥವಾ ಆಯಾ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಕರೆ ಮಾಡಬಹುದು. ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಪರಿಸ್ಥಿತಿ ನಿಭಾಯಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.