ಹಾಸನ: ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲ ಅಧಿಕಾರಿಗಳು ಎಚ್ಚರಿಕೆಯಿಂದ ಇದ್ದು, ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೂರ್ವ ಮುಂಗಾರಿನಲ್ಲಿ ಮಳೆಯಿಂದ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮಾಡಿ, ಪರಿಹಾರ ಪಡೆಯಲು ಅವಕಾಶ ಆಗುವಂತೆ ಮಾಹಿತಿ ಅಪ್ ಲೋಡ್ ಮಾಡಬೇಕು ಎಂದು ತಿಳಿಸಿದರು.
ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯುವಂತೆ ಉಪ ಕಾಲುವೆಗಳ ಹೂಳು ತೆಗೆಸಲು ಕ್ರಮ ಕೈಗೊಳ್ಳಬೇಕು. ಜಲಾಶಯಗಳ ಭದ್ರತೆ ಬಗ್ಗೆ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಕುಡಿಯುವ ನೀರು ಮತ್ತು ಪಶುಗಳ ಮೇವಿಗೆ ಯಾವುದೇ ಸಮಸ್ಯೆಯಿಲ್ಲ. ಮಳೆಯಿಂದ ಹಾನಿಯಾಗಿರುವ ಮನೆಗಳ ಬಗ್ಗೆ ಗಮನಹರಿಸಿ ಪರಿಶೀಲನೆ ಮಾಡುವಂತೆ ಸೂಚಿಸಿದರು.
ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಮರುಕಳಿಸದಂತೆ ಎಚ್ಚರ ವಹಿಸಿ ಕಾಮಗಾರಿ ಪೂರ್ಣಗೊಳಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ರೋಗಗಳು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜಾಗ್ರತೆ ವಹಿಸಬೇಕು. ಮುಜರಾಯಿ ದೇವಾಲಯಗಳ ಆಸ್ತಿಯನ್ನು ಖಾತೆ ಮಾಡಲು ಆಸಕ್ತಿ ವಹಿಸಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಲೋಕೋಪಯೋಗಿ ಕೃಷಿ ಜಂಟಿ ನಿರ್ದೇಶಕ ರಮೇಶ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು.
30 ರಂದು ಬಸವ ಜಯಂತಿ
ಹಾಸನ: ಬಸವ ಜಯಂತಿಯನ್ನು ಏ.30 ರಂದು ನಗರದ ಕಲಾಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರ ವಹಿಸಬೇಕು ಎಂದರು. ಸಮುದಾಯದ ಮುಖಂಡರ ಒಮ್ಮತದ ಅಭಿಪ್ರಾಯದಂತೆ ನಿಗದಿಪಡಿಸಿದ ದಿನಾಂಕದಂದು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ತಾರಾನಾಥ್ ಸಮುದಾಯದ ಮುಖಂಡರು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.