ಹಾಸನ: ನೆರೆ ರಾಜ್ಯದಿಂದ ಬಂದು ಸಕಲೇಶಪುರ–ಆಲೂರು ವಿಧಾನಸಭಾ ಕ್ಷೇತ್ರದಲ್ಲಿ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ದಲಿತಪರ ಹೋರಾಟಗಾರರ ಒಕ್ಕೂಟದ ಅಧ್ಯಕ್ಷ ದಿನೇಶ್ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಸಿ. ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿರುವ, ಮುರಳಿ ಮೋಹನ್ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಗಡೀಪಾರು ಮಾಡುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.
ಜ.16ರಂದು ಸಕಲೇಶಪುರದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಜನಸ್ಪಂದನ ಸಭೆ ನಡೆಸಿದ್ದು, ಅಂದು ಸಂಜೆ ಅಧಿಕಾರಿಗಳ ಸಭೆಗೆ ತೆರಳುತ್ತಿದ್ದ ಡಿ.ಸಿ. ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಹೇಳಿದರು.
ಸಚಿವರೊಂದಿಗೆ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ, ಮುರಳಿ ಮೋಹನ್ ಅವರು ಗೇಟ್ ಮುಂದೆ ತಡೆದು, ಏಕವಚನದಲ್ಲಿ ನಿಂದಿಸಿ, ಸಣ್ಣಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮುರುಳಿ ಮೋಹನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಘಟನೆ ನಡೆದ ಸಂದರ್ಭದಲ್ಲಿ ಅಲ್ಲಿಯೇ ಇದ್ದ ಸಿಪಿಐ ವಿರುದ್ಧವೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ವಿಚಾರವನ್ನು ಕಾಂಗ್ರೆಸ್ ಜಿಲ್ಲಾ ಹಾಗೂ ರಾಜ್ಯ ಘಟಕದ ನಾಯಕರು ಗಂಭೀರವಾಗಿ ಪರಿಗಣಿಸಿ ಮುರುಳಿ ಮೋಹನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿನ ಪಕ್ಷದ ನಾಯಕರ ಭದ್ರತೆ ಮತ್ತು ಗೌರವವನ್ನು ಕಾಪಾಡುವುದು ಪಕ್ಷದ ಕರ್ತವ್ಯ ಎಂದು ತಿಳಿಸಿದರು.
ವಿಠಲ, ರಮೇಶ್, ಜಗದೀಶ್, ಶಿವಣ್ಣ, ನಾಗರಾಜ್, ಮಧುಸೂದನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.