ADVERTISEMENT

ಮೈತ್ರಿ ಸರ್ಕಾರಕ್ಕೆ ಧಕ್ಕೆ ಇಲ್ಲ

ಶೋಭಾಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಿ: ರೇವಣ್ಣ

​ಪ್ರಜಾವಾಣಿ ವಾರ್ತೆ
Published 17 ಜನವರಿ 2019, 14:26 IST
Last Updated 17 ಜನವರಿ 2019, 14:26 IST
ಎಚ್‌.ಡಿ.ರೇವಣ್ಣ
ಎಚ್‌.ಡಿ.ರೇವಣ್ಣ   

ಹಾಸನ: ಬಿಜೆಪಿಯವರು ಏನೇ ಪ್ರಯತ್ನ ಮಾಡಿದರೂ, ರಾಜ್ಯ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಸಚಿವ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

‘ಬಿಜೆಪಿಯವರು ಇನ್ನಷ್ಟು ದಿನ ಐಷಾರಾಮಿ ಹೋಟೆಲ್ ನಲ್ಲಿದ್ದು ರಾಜಕೀಯ ಮಾಡಲಿ’ ಎಂದು ಗೇಲಿ ಮಾಡಿದ ಅವರು, ‘ಯಡಿಯೂರಪ್ಪ ಅವರಿಗೆ ಬದ್ಧತೆ ಇದ್ದರೆ ಕೇಂದ್ರದಿಂದ ಅನುದಾನ ತರುವ ಮೂಲಕ ರಾಜ್ಯದ ಹಿತಕಾಯುವ ಕೆಲಸ ಮಾಡಲಿ. ಅದನ್ನು ಬಿಟ್ಟು ಈ ರೀತಿಯ ರಾಜಕೀಯ ಮಾಡಿದ್ರೆ, ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಎದುರಿಸಬೇಕಾಗುತ್ತದೆ’ ಎಂದು ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಸಂಸದ ಎಚ್‌.ಡಿ.ದೇವೇಗೌಡರು ಹಾಗೂ ಇತರರಿಗೆ ಈಗ ನೆನಪಾಗಿದೆ ಎಂಬ ಬಿಜೆಪಿ ಟೀಕೆಗೆ ಗರಂ ಆದ ರೇವಣ್ಣ, ‘ಅವರಿಗೆ ಮಾನ ಮರ್ಯಾದೆ ಇದ್ದರೆ ಕಡತ ತೆಗೆದು ನೋಡಲಿ. ದೇವೇಗೌಡರು, ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರು ಎಷ್ಟು ಬಾರಿ ಕೇಂದ್ರಕ್ಕೆ ಹೋಗಿ ಮನವಿ ಮಾಡಿದ್ದೇವೆ ಎಂಬುದನ್ನು ನೋಡಲಿ. ಹೋಟೆಲ್ ನಲ್ಲಿ ಕೂತು ಮಜಾ ಮಾಡುವುದಲ್ಲ’ ಎಂದು ಕಾಲೆಳೆದರು.

ADVERTISEMENT

‘ಯಡಿಯೂರಪ್ಪ ಸಮ್ಮಿಶ್ರ ಸರ್ಕಾರದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೆ ಶೋಭಕ್ಕನ್ನು ಚೆನ್ನಾಗಿ ನೋಡಿಕೊಳ್ಳಲಿ. ಅವರಿಗೆ ಮಹಿಳಾ ಕೋಟಾದಡಿ ಕೇಂದ್ರದಲ್ಲಿ ಮಂತ್ರಿ ಸ್ಥಾನ ಕೊಡಿಸಲಿ. ಅದರಲ್ಲೂ ಗ್ರಾಮೀಣಾಭಿವೃದ್ಧಿ ಖಾತೆಯೇ ನೀಡಲಿ. ಹೇಗಿದ್ದರೂ ರಾಜ್ಯದಲ್ಲಿ ಬರ ಇದೆ. ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಹಾರ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಲಿ’ ಎಂದು ಸಲಹೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮಂಜೂರಾಗುವ ಅನುದಾನವನ್ನು ಫೆ.15ರೊಳಗೆ ಸದ್ಬಳಕೆ ಮಾಡಿಕೊಳ್ಳುವಂತೆ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ಮತ್ತು ಅಂಗವಿಕಲ ಪಿಂಚಣಿಗಾಗಿ ಜನರು ಶಾಸಕರು, ಮುಖ್ಯಮಂತ್ರಿ ಮನೆ ಬಾಗಿಲಿಗೆ ಬರುತ್ತಿದ್ದಾರೆ. ತಳಮಟ್ಟದ ಅಧಿಕಾರಿಗಳು ಯಾವ ರೀತಿ ಕೆಲಸ ಮಾಡುತ್ತಿದ್ದಾರೆ. ಇನ್ನು 15 ರಿಂದ 20 ದಿನ ಕಾಲಾವಕಾಶ ನೀಡಲಾಗುವುದು. ಬಳಿಕ ಖುದ್ದು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಯಾವುದಾದರೂ ಪ್ರಕರಣಗಳು ನನ್ನ ಬಳಿಗೆ ಬಂದರೆ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಜಿಲ್ಲೆಯ ಸರ್ವೇ ಅಧಿಕಾರಿಗಳು ರೈತರಿಗೆ ತೊಂದರೆ ನೀಡದಂತೆ ಕಾನೂನು ಪ್ರಕಾರ ಕೆಲಸ ಮಾಡಲಿ. ಖಜಾನೆ ಇಲಾಖೆಯಲ್ಲಿ ಮೂವರು ನೌಕರರು ಲಂಚ ಪಡೆಯದೇ ಯಾವುದೇ ಬಿಲ್ ಪಾಸ್ ಮಾಡುತ್ತಿಲ್ಲ ಎಂಬುದರ ಬಗ್ಗೆ ಸಾಕಷ್ಟು ದೂರು ಬಂದಿದೆ. ನಿವೃತ್ತ ಶಿಕ್ಷರಿಂದಲೂ ಹಣ ಪಡೆಯಲಾಗುತ್ತಿದೆ. ಈ ಇಲಾಖೆಯ ಬಗ್ಗೆ ಎಸಿಬಿ ಅಧಿಕಾರಿಗಳು ನಿಗಾ ವಹಿಸಬೇಕು’ ಎಂದರು.

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಅಭಿವೃದ್ಧಿ ಕುಂಠಿತ ಆಗಬಾರದು. ಇನ್ನು ಮುಜರಾಯಿ ಇಲಾಖೆಗೆ ಬಿಡುಗೆಯಾಗುವ ಅನುದಾನ ಸಮರ್ಪಕವಾಗಿ ಬಳಕೆ ಮಾಡುವಂತೆ ಅಧಿಕಾರಿಗೆ ಸೂಚಿಸಲಾಗಿದೆ ಎಂದರು. ಬರ ಹಿನ್ನಲೆಯಲ್ಲಿ ಕುಡಿಯುವ ನೀರು ಸರಬರಾಜಿಗೆ ತೊಂದರೆ ಆಗದಂತೆ ವಿದ್ಯುತ್ ಸಂಪರ್ಕ ಕಡಿತ ಮಾಡದಂತೆ ಸೆಸ್ಕ್ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಅಗತ್ಯವಿರುವ ಕಡೆ ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಳವಡಿಸಬೇಕು ಎಂಬುದರ ಪಟ್ಟಿ ನೀಡುವಂತೆ ತಿಳಿಸಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.