ADVERTISEMENT

ಮಳೆಗಾಲದಲ್ಲಿ ನೈಸರ್ಗಿಕ ವಿಕೋಪ ನಿಭಾಯಿಸಲು ಕ್ರಮ: ಡಿಸಿ

ಹತ್ತು ದಿನದೊಳಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಮೇ 2019, 12:11 IST
Last Updated 11 ಮೇ 2019, 12:11 IST
ಹಾಸನದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ಹಾಸನದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಅವರು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.   

ಹಾಸನ: ಮಳೆಗಾಲದಲ್ಲಿ ಸಂಭವಿಸಬಹುದಾದ ನೈಸರ್ಗಿಕ ವಿಕೋಪಗಳ ನಿರ್ವಹಣೆಗೆ ಈಗಲೇ ಮುಂಜಾಗ್ರತಾ ಕ್ರಮ ಕೈಗೊಂಡು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದರು.

ಮಳೆಗಾಲದಲ್ಲಿ ಸಂಭವಿಸಬಹುದಾದ ನೈಸರ್ಗಿಕ ವಿಕೋಪಗಳ ಮುಂಜಾಗ್ರತಾ ಕ್ರಮ ಕುರಿತ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಹಲವು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಅಪಾಯ ಸಂಭವಿಸಬಹುದಾದ ಸ್ಥಳಗಳಿಗೆ ಕೂಡಲೇ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಆ ಸ್ಥಳಗಳಿಗೆ ಅವಶ್ಯಕವಿರುವ ಪೂರ್ವ ಸಿದ್ಧತೆಗಳ ಬಗ್ಗೆ ಗಮನಹರಿಸಬೇಕು ಮತ್ತು 10 ದಿನದೊಳಗೆ ವರದಿ ಸಲ್ಲಿಸಬೇಕು ಎಂದರು.

ADVERTISEMENT

ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ತಾತ್ಕಾಲಿಕ ಆಶ್ರಯ ಕೇಂದ್ರ ತೆರೆದು ಅಲ್ಲಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಆಹಾರ ಪೂರೈಸಬೇಕು. ಜನರಿಗೆ ಅವಶ್ಯಕವಿರುವ ಔಷಧಿಗಳು ಹಾಗೂ ಇತರೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಆರೋಗ್ಯ ಇಲಾಖೆ ಸಿದ್ಧವಾಗಿರಬೇಕು ಎಂದು ತಿಳಿಸಿದರು.

ತುರ್ತು ಸಂದರ್ಭದಲ್ಲಿ ನುರಿತ ಸಾರ್ವಜನಿಕರ ಸಹಾಯ ಪಡೆಯಲು ಮಾನವ ಸಂಪನ್ಮೂಲ, ತಾಂತ್ರಿಕ ಮತ್ತು ಯಾಂತ್ರಿಕ ಸಂಪನ್ಮೂಲಗಳ ಯೋಜನೆ ತಯಾರಿಸಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳಿಗೆ ನೀಡಿರುವ ವಾಹನಗಳು ಸದಾ ಸೇವೆಗೆ ಸಿದ್ಧವಿರುವಂತೆ ಎಚ್ಚರ ವಹಿಸಬೇಕು. ಅಲ್ಲದೆ ಇದಕ್ಕೆ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವುದರ ಜೊತೆಗೆ ಬಿಲ್ಲುಗಳನ್ನು ಕೂಡಲೇ ಸಲ್ಲಿಸಿ ಅವಶ್ಯಕ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎನ್ ವಿಜಯ ಪ್ರಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ, ಉಪವಿಭಾಗಾಧಿಕಾರಿಗಳಾದ ಎಹೆಚ್.ಎಲ್ ನಾಗರಾಜ್, ಕವಿತಾ ರಾಜಾರಾಂ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.