ಜಾವಗಲ್: ವಿದ್ಯಾರ್ಥಿಗಳಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ ‘ಪ್ರಜಾವಾಣಿ’ ದಿನಪತ್ರಿಕೆ ಸಹಕಾರಿಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರಾ ಧರ್ಮೇಗೌಡ ತಿಳಿಸಿದರು.
ಇಲ್ಲಿನ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ದಿನಪತ್ರಿಕೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಪ್ರಜಾವಾಣಿ’ಯಲ್ಲಿ ಪ್ರತಿನಿತ್ಯ ಪ್ರಕಟವಾಗುವ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ದಿಕ್ಸೂಚಿ ಅಂಕಣವು ವಿದ್ಯಾರ್ಥಿಗಳಿಗೆ ಬಹು ಉಪಯುಕ್ತವಾಗಿದ್ದು, ವಿದ್ಯಾರ್ಥಿಗಳು ಶಾಲಾ ಪಠ್ಯ ಪುಸ್ತಕದ ಜೊತೆಗೆ ಅಂಕಣದಲ್ಲಿ ಪ್ರಕಟವಾಗುವ ಪ್ರಶ್ನೋತ್ತರಗಳನ್ನು ಅಭ್ಯಾಸ ಮಾಡಿ. ಪತ್ರಿಕೆಯಲ್ಲಿ ಪ್ರಕಟವಾಗುವ ಇನ್ನಿತರೆ ಪ್ರಚಲಿತ ವಿದ್ಯಮಾನಗಳನ್ನು ಓದಿ ತಿಳಿದುಕೊಳ್ಳುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಂಡು ಪರೀಕ್ಷೆಗಳಲ್ಲಿ ಉತ್ತಮ ಅಂಕವನ್ನು ಗಳಿಸಿ ಭವಿಷ್ಯದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಮಾತನಾಡಿ, ‘ಸರ್ಕಾರಿ ಪ್ರೌಢ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ 160 ದಿನ ‘ಪ್ರಜಾವಾಣಿ’ ಪತ್ರಿಕೆಯನ್ನು ಗ್ರಾಮ ಪಂಚಾಯಿತಿಯಿಂದ ಉಚಿತವಾಗಿ ಶಾಲೆಗೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಭಾಕರ್, ಪರಮೇಶ್, ಭಾಗ್ಯಶ್ರೀ, ಯಶೋದಮ್ಮ, ರೇಷ್ಮಾ ಭಾನು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆ.ಪಿ ನಂದಿನಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಪ್ರಕಾಶ್, ಬಿಜೆಪಿ ಬೇಲೂರು ಮಂಡಲದ ಪ್ರಧಾನ ಕಾರ್ಯದರ್ಶಿ ಮಸಾಲೆ ರಮೇಶ್ ಹಾಗೂ ಪ್ರೌಢಶಾಲೆ ಶಿಕ್ಷಕ ಬೀರೇಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.