
ಅರಕಲಗೂಡು: ಇಲ್ಲಿನ ಗ್ರೇಡ್ -2 ತಹಶೀಲ್ದಾರರಿಗೆ ಸಕಲೇಶಪುರ ಉಪ ವಿಭಾಗಾಧಿಕಾರಿ ರಾಜೇಶ್ ಜಾತಿ ನಿಂದನೆ ಮಾಡಿ ಅಪಮಾನಿಸಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಪರ ಸಂಘಟನೆಗಳು ಸೋಮವಾರದಿಂದ ಇಲ್ಲಿನ ತಾಲ್ಲೂಕು ಕಚೇರಿ ಮುಂದೆ ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಮಂಗಳವಾರ ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.
ಜಿಲ್ಲಾಧಿಕಾರಿ ಬಂದು ಸಮಸ್ಯೆ ಆಲಿಸಿ, ಉಪವಿಭಾಗಾಧಿಕಾರಿ ರಾಜೇಶ್ ವಿರುದ್ದ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪ್ರತಿಭಟನಕಾರರು ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದ್ದರು.
ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್, ಪ್ರತಿಭಟನಾನಿರತ ಮುಖಂಡರೊಂದಿಗೆ ಸಭೆ ನಡೆಸಿ, ಸಮಸ್ಯೆ ಆಲಿಸಿದರು. ಸಭೆಯಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಮುಖಂಡರು, ಉಪ ವಿಭಾಗಾಧಿಕಾರಿ ನಡೆ ಖಂಡನೀಯ. ಗ್ರೇಡ್ 2 ತಹಶೀಲ್ದಾರ್ ಸ್ವಾಮಿ ಅವರಲ್ಲಿ ಕ್ಷಮೆ ಯಾಚಿಸಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬುಧವಾರ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಮಂಜುನಾಥ್ ಭರವಸೆ ನೀಡಿದರು. ಬಳಿಕ ಮನವಿ ಸಲ್ಲಿಸಿದ ಮುಖಂಡರು, ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ. ಸಮಾಧಾನಕರವಾದ ಪರಿಹಾರ ದೊರಕದಿದ್ದರೆ ಮತ್ತೆ ಪ್ರತಿಭಟನೆ ಮುಂದುವರಿಯಲಿದೆ ಎಂದರು.
ತಹಶೀಲ್ದಾರ್ ಸೌಮ್ಯ, ಮುಖಂಡರಾದ ನಿಂಗರಾಜ್, ಚಂದ್ರಪ್ಪ, ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.