ADVERTISEMENT

'ಮಹೇಶ್ ಜೋಶಿ ಅವರನ್ನು ಕಸಾಪ ಅಧ್ಯಕ್ಷ ಸ್ಥಾನದಿಂದ ಮಜಾಗೊಳಿಸಿ'

ಜನಪರ ಸಂಘಟನೆಗಳ ವೇದಿಕೆ ಸದಸ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಮೇ 2025, 16:04 IST
Last Updated 28 ಮೇ 2025, 16:04 IST
ಕನ್ನಡ ಸಾಹಿತ್ಯ ಪರಿಷತ್ ಪ್ರೇಮಿಗಳು ಹಾಗೂ ಜನಪರ ಸಂಘಟನೆಗಳ ವೇದಿಕೆ ಸದಸ್ಯರು ಬುಧವಾರ ಹಾಸನದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡ ಸಾಹಿತ್ಯ ಪರಿಷತ್ ಪ್ರೇಮಿಗಳು ಹಾಗೂ ಜನಪರ ಸಂಘಟನೆಗಳ ವೇದಿಕೆ ಸದಸ್ಯರು ಬುಧವಾರ ಹಾಸನದಲ್ಲಿ ಪ್ರತಿಭಟನೆ ನಡೆಸಿದರು.   

ಹಾಸನ: ಅಧಿಕಾರ ದುರುಪಯೋಗ, ಭ್ರಷ್ಟಾಚಾರ, ಬೈಲಾ ತಿದ್ದುಪಡಿಯಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಮಹೇಶ್ ಜೋಶಿ ಅವರನ್ನು ವಜಾಗೊಳಿಸಿ, ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಕನ್ನಡ ಸಾಹಿತ್ಯ ಪರಿಷತ್ ಪ್ರೇಮಿಗಳು ಹಾಗೂ ಜನಪರ ಸಂಘಟನೆಗಳ ವೇದಿಕೆ ಸದಸ್ಯರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಆರಂಭಿಸಿದ ಸದಸ್ಯರು, ಎನ್.ಆರ್. ವೃತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತೆರಳಿ, ಎದುರು ಕೆಲಕಾಲ ಧರಣಿ ನಡೆಸಿದರು.

ಸಾಹಿತಿ ಮೇಟಿಕೆರೆ ಹಿರಿಯಣ್ಣ ಮಾತನಾಡಿ, ಸರ್ವಾಧಿಕಾರಿ ಧೋರಣೆ ಹೊಂದಿರುವ ಮಹೇಶ್ ಜೋಶಿ ಅವರನ್ನು ಸರ್ಕಾರ ಕೂಡಲೇ ಅಧಿಕಾರದಿಂದ ಕೆಳಗಿಳಿಸಬೇಕು. ಸೂಕ್ತ ತನಿಖೆ ಕೈಗೊಂಡು, ಅವರಿಗೆ ನೀಡಿರುವ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ADVERTISEMENT

ಕನ್ನಡ ಸಾಹಿತ್ಯ ಪರಿಷತ್, ನಾಡು, ನುಡಿ, ಸಂಸ್ಕೃತಿ ಉಳಿಸಲು ಕೆಲಸ ಮಾಡಬೇಕು. ಆದರೆ ಮೂರು ವರ್ಷದಿಂದ ಅಧಿಕಾರ ಹಿಡಿದಿರುವ ಮಹೇಶ್ ಜೋಷಿ ಸರ್ವಾಧಿಕಾರಿ ಧೋರಣೆ, ದಬ್ಬಾಳಿಕೆ ಮೂಲಕ ಆಡಳಿತ ನಡೆಸುತ್ತಿದ್ದಾರೆ. ಪರಿಷತ್ತಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದಾರೆ. ಇದರ ವಿರುದ್ಧ ಜನಪರ ಸಂಘ ಸಂಸ್ಥೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಮ್ಮ ಪ್ರತಿಭಟನೆ ನಿರಂತರವಾಗಿ ಮುಂದುವರಿಯಲಿದೆ ಎಂದು ಹೇಳಿದರು.

ಜನಪದ ವಿದ್ವಾಂಸ ಡಾ. ಹಂಪನಹಳ್ಳಿ ತಿಮ್ಮೇಗೌಡ ಮಾತನಾಡಿ, ಮಹೇಶ್ ಜೋಷಿ ಅವರನ್ನು ಅಧಿಕಾರದಿಂದ ವಜಾ ಗೊಳಿಸುವಂತೆ ಆಗ್ರಹಿಸಿ ಹೋರಾಟ ಆರಂಭಿಸಿದ್ದು, ಇದನ್ನು ತಾರ್ಕಿಕ ಅಂತ್ಯ ಕಾಣಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು.

ಸಾಹಿತ್ಯ ಪರಿಷತ್ ಜನರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಒಬ್ಬ ವ್ಯಕ್ತಿಯ ಆಸ್ತಿಯಲ್ಲ. ಈಗಿರುವ ಅಧ್ಯಕ್ಷರು ಸಾಹಿತಿಯಲ್ಲ. ಸಂಸ್ಕೃತಿಯ ಬಗ್ಗೆ ಅರಿವೂ ಇಲ್ಲ. ಕನ್ನಡಿಗರನ್ನು ಪ್ರೀತಿಸುವ ಬದಲು ಪರಿಷತ್ತಿನಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಪ್ರಶ್ನಿಸಿದವರಿಗೆ ಬೆದರಿಕೆ ಹಾಕುವುದು, ಸದಸ್ಯತ್ವವನ್ನು ರದ್ದು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಮಹೇಶ್ ಜೋಶಿ ರಾಜಕೀಯ ಪುಢಾರಿಗಳಂತೆ ವರ್ತಿಸುತ್ತಿದ್ದು, ಇದುವರೆಗೂ ಯಾವುದೇ ಭಾಷೆ ಚಳವಳಿಗಳ ಮುಂದಾಳತ್ವ ವಹಿಸಿಲ್ಲ. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆದಾಗ ಸಾಹಿತ್ಯ ಪರಿಷತ್ ಕನ್ನಡಿಗರ ಪರ ನಿಲ್ಲಲಿಲ್ಲ. ಸಾವಿರಾರು ಸರ್ಕಾರಿ ಶಾಲೆಗಳು ಮುಚ್ಚುತ್ತಿರುವುದರ ವಿರುದ್ಧ ಪರಿಷತ್ ವಿರುದ್ಧ ಧ್ವನಿ ಎತ್ತಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಲಿತ ಮುಖಂಡ ಕೃಷ್ಣ ದಾಸ್ ಮಾತನಾಡಿ, ಮಹೇಶ್ ಜೋಶಿ ಅವರ ವಿರುದ್ಧ ಮಂಡ್ಯ ಹಾಗೂ ಹಾಸನದಲ್ಲಿ ಹೋರಾಟ ನಡೆಯುತ್ತಿದ್ದು, ಇದು ರಾಜ್ಯಕ್ಕೆ ವಿಸ್ತರಿಸಬೇಕು. ಸಾಹಿತ್ಯ ಅಭಿಮಾನಿಗಳು ಹೋರಾಟಗಾರರು ದುರಾಡಳಿತದ ವಿರುದ್ಧ ಧ್ವನಿ ಎತ್ತಬೇಕು. ಸರ್ವಾಧಿಕಾರಿ ಧೋರಣೆ ಹೊಂದಿರುವ ಮಹೇಶ್ ಜೋಶಿ ಅವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಚೇರಿಯ ಎದುರು ಹೋರಾಟ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಬೇಕು ಎಂದರು.

ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಿಐಟಿಯು ಧರ್ಮೇಶ್, ಪತ್ರಕರ್ತ ಆರ್.ಪಿ. ವೆಂಕಟೇಶಮೂರ್ತಿ, ವೆಂಕಟೇಶ್, ಎನ್.ಎಲ್. ಚನ್ನೇಗೌಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಉದಯ ರವಿ, ಸತೀಶ್, ಹರೀಶ್ ಕಟ್ಟೆ ಬೆಳುಗುಳಿ, ಪಿ.ಶಡ್ರಾಕ್, ಟಿ.ಆರ್. ವಿಜಯಕುಮಾರ್, ಎಚ್.ಆರ್. ನವೀನ್ ಕುಮಾರ್, ಎಂ.ಜಿ. ಪೃಥ್ವಿ , ಅರವಿಂದ್, ಸತೀಶ್ ಪಟೇಲ್, ಜಯರಾಮ್, ಹರೀಶ್, ಶಂಕರ್ ಹಾಗೂ ಇತರರು ಭಾಗವಹಿಸಿದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.