ಹಾಸನ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಬಲವಂತದ ಭೂ ಸ್ವಾಧೀನ ವಿರೋಧಿ ಹೋರಾಟಗಾರರನ್ನು ಬಂಧಿಸಿದ ಪೊಲೀಸರ ದೌರ್ಜನ್ಯ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನಡೆ ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಹಾಗೂ ಮಹಿಳೆಯರು ನಗರದ ಮಹಾವೀರ ವೃತ್ತದ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೂ ಮುನ್ನ ಸಭೆ ನಡೆಸಿ, ದೇವನಹಳ್ಳಿ ರೈತರ ಹಕ್ಕೊತ್ತಾಯ ಈಡೇರಿಸಿ, ಭೂ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ನಂತರ ಮಹಾವೀರ ವೃತ್ತದ ಎದುರು ಕೆಲಕಾಲ ಧರಣಿ ನಡೆಸಿದ ಪ್ರತಿಭಟನಕಾರರು, ಹೋರಾಟಗಾರರ ಮೇಲಿನ ದೌರ್ಜನ್ಯ ಖಂಡಿಸಿ ಧಿಕ್ಕಾರ ಕೂಗಿದರು.
ಈ ವೇಳೆ ದಲಿತ ಮುಖಂಡ ಅಂಬಿಗ ಮಲ್ಲೇಶ್ ಮಾತನಾಡಿ, ರೈತರ ಪರ ಹೋರಾಟ ಮಾಡುವ ಸಂದರ್ಭದಲ್ಲಿ ಮುಖಂಡರನ್ನು ಬಂಧಿಸಿರುವುದು ಖಂಡನಾರ್ಹ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ಬಾರಿ ಸಮಾಲೋಚನಾ ಸಭೆ ನಡೆಸಿ, ಭೂಮಿಯನ್ನು ಯಾವುದೇ ಕಾರಣಕ್ಕೂ ವಶಕ್ಕೆ ಪಡೆಯುವುದಿಲ್ಲ ಎಂದು ರೈತರಿಗೆ ಭರವಸೆ ನೀಡಿದ್ದರು. ಇದೀಗ ಭೂಸ್ವಾಧೀನ ನೋಟಿಸ್ ಜಾರಿ ಮಾಡಿರುವುದು ರೈತರಿಗೆ ಮಾಡಿದ ಅನ್ಯಾಯ ಎಂದು ಆರೋಪಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಿಟ್ಟು ಸಂಘಟನೆಯ ಮುಖಂಡರನ್ನು ನಾಯಿಗಳಂತೆ ಎಳೆದು ಬಂಧಿಸಿದೆ. ಇದನ್ನು ಬಲವಾಗಿ ಖಂಡಿಸುತ್ತೇವೆ. ಅಧಿಕಾರಕ್ಕೆ ಬರುವಾಗ ರೈತರು ಬೇಕು ಎಂದು ಹೇಳುವ ಸಿದ್ದರಾಮಯ್ಯ ಸರ್ಕಾರ, ಇದೀಗ ವಚನಭ್ರಷ್ಟವಾಗಿದೆ ಎಂದು ದೂರಿದರು.
ರೈತರ ಭೂಮಿಯನ್ನು ಕಿತ್ತುಕೊಳ್ಳುತ್ತಿರುವ ಸರ್ಕಾರದ ನಡೆ ಜನ ವಿರೋಧಿಯಾಗಿದ್ದು, ಆನೇಕಲ್, ದೊಡ್ಡಬಳ್ಳಾಪುರ, ನೆಲಮಂಗಲ, ಮಾಗಡಿ, ಚನ್ನಪಟ್ಟಣ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲಿ ಕೃಷಿ ಭೂಮಿ ಕಡಿಮೆಯಾಗುತ್ತಿದೆ. ಕೃಷಿ ಚಟುವಟಿಕೆ ಅವಲಂಬಿಸಿರುವ ರೈತರ ಭೂಮಿಯನ್ನು ಕಸಿದುಕೊಳ್ಳುವ ಪ್ರಯತ್ನ ಸರಿಯಲ್ಲ ಎಂದರು.
ಕೆಪಿಆರ್‌ಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎಚ್.ಎಸ್. ಮಂಜುನಾಥ್, ಎಂ.ಬಿ. ಪುಷ್ಪಾ, ಎಂ.ಜಿ. ಪೃಥ್ವಿ, ರಾಜು ಗೊರೂರು, ವಿವೇಕ್, ರಾಜು ಸಿಗರನಹಳ್ಳಿ, ಜಯಲಕ್ಷ್ಮಿ, ಅರವಿಂದ, ಮಹಿಳೆಯರು, ಸಾರ್ವಜನಿಕರು, ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.
ರಾಜ್ಯ ಸರ್ಕಾರ ನೈತಿಕ ಹೊಣೆ ಹೊತ್ತು ಈಗಾಗಲೇ ಬಂಧಿಸಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗುವುದು.ಅಂಬುಗ ಮಲ್ಲೇಶ್ ದಲಿತ ಮುಖಂಡ
ಫಲವತ್ತಾದ ಭೂಮಿ ವಶಕ್ಕೆ: ಆಕ್ಷೇಪ
ಭೂಸ್ವಾಧೀನ ವಿರೋಧಿಸಿ ದೇವನಹಳ್ಳಿಯ ರೈತರು 3 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ರೈತರ ಫಲವತ್ತಾದ ಕೃಷಿ ಭೂಮಿ ವಶಕ್ಕೆ ಪಡೆದು ಕಾರ್ಪೊರೇಟ್ ಮಂದಿಯನ್ನು ಸಮಾಧಾನ ಮಾಡಲು ಸರ್ಕಾರ ಹೊರಟಿದೆ ಎಂದು ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮೇಶ್ ಆರೋಪಿಸಿದರು. ಈ ಹಿಂದೆ ಕಾಂಗ್ರೆಸ್ ನಾಯಕರು ದೇವನಹಳ್ಳಿ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದರು. ಇದೀಗ ಅಧಿಕಾರಕ್ಕೆ ಬಂದ ಮೇಲೆ ಹೋರಾಟ ಮಾಡುತ್ತಿದ್ದ ಸಂಘಟನೆಯ ಮುಖಂಡರನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಇದನ್ನು ಖಂಡಿಸಿ ರಾಜ್ಯದಾದ್ಯಂತ ಹೋರಾಟ ಮಾಡಲಾಗುತ್ತಿದ್ದು ಕೂಡಲೇ ಬಂಧಿತರನ್ನು ಸರ್ಕಾರ ಬಿಡುಗಡೆ ಮಾಡಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.