ADVERTISEMENT

ಪಿಎಸ್‌ಐ ಹಗರಣದ ತಪ್ಪಿತಸ್ಥರನ್ನು ಬಿಡುವುದಿಲ್ಲ: ಸಚಿವ ಕೆ.ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 13 ಮೇ 2022, 15:26 IST
Last Updated 13 ಮೇ 2022, 15:26 IST
ಕೆ.ಗೋಪಾಲಯ್ಯ
ಕೆ.ಗೋಪಾಲಯ್ಯ   

ಹಾಸನ: ‘ಪಿಎಸ್‌ಐ ಪರೀಕ್ಷೆ ನೇಮಕಾತಿ ಅಕ್ರಮ ಪ್ರಕರಣವನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮುಚ್ಚಿ ಹಾಕುವುದಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ’ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಪ್ರಕರಣ ಹೊರ ಬೀಳುತ್ತಿದ್ದಂತೆಯೇ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕಟ್ಟಿಟ್ಟ ಬುತ್ತಿ. ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಯಾವುದೇ ವರ್ಗದ ಜನರು ಇದ್ದರೂ ಅವರ ವಿರುದ್ಧ ಕ್ರಮಕ್ಕೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸೂಚಿಸಿದ್ದಾರೆ’ ಎಂದು ತಿಳಿಸಿದರು.

ಸಹಾಯಕ‌ ಪ್ರಾಧ್ಯಾಪಕರ ಹುದ್ದೆ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದ‌ ಸಚಿವರು, ‘ಈ ವಿಚಾರ ಮುಖ್ಯಮಂತ್ರಿ ಗಮನಕ್ಕೂ ಬಂದಿದ್ದು, ಕ್ರಮ ಕೈಗೊಳ್ಳಲಿದ್ದಾರೆ‌’ ಎಂದರು.

ADVERTISEMENT

‘ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಹಗರಣದಲ್ಲಿ ಭಾಗಿಯಾಗಿಲ್ಲ. ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಏಳ್ಗೆ ಸಹಿಸದೆ ವಿರೋಧ ಪಕ್ಷಗಳು ಇಲ್ಲದ ಆರೋಪ ಮಾಡುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಯಾವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದನ್ನು ನಿರ್ಣಯಿಸುವುದು ಮತದಾರರು ಮಾತ್ರ. ‌ರಾಜಕೀಯ ನಾಯಕರು ಏನೇ ಹೇಳಿದರೂ ಅಂತಿಮ ತೀರ್ಪು ಮತದಾರನ ಕೈಯಲ್ಲಿ ಇರುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.‌‌‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.