ADVERTISEMENT

ರಫೇಲ್ ಒಪ್ಪಂದ; ಕಾಂಗ್ರೆಸ್ ಅಪಪ್ರಚಾರ

ಡಿ.ಸಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2018, 12:28 IST
Last Updated 19 ಡಿಸೆಂಬರ್ 2018, 12:28 IST
 ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
 ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಹಾಸನ : ‘ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ದೇಶದ ರಕ್ಷಣೆಯ ಗೌಪ್ಯತೆ ಕಾಪಾಡುವ ಉದ್ದೇಶದಿಂದ ಆ ಬಗ್ಗೆ ಮಾಹಿತಿ ಕೇಳಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿರುವಾಗ ಯುದ್ದ ವಿಮಾನ ಖರೀದಿ ಒಪ್ಪಂದವನ್ನು ಬಹಿರಂಗಪಡಿಸಬೇಕು ಎಂದು ಹೇಳುತ್ತಿರುವುದು ಸರಿಯಲ್ಲ. ಇದರಿಂದ ದೇಶದ ರಕ್ಷಣಾ ನೀತಿಯನ್ನು ಬಹಿರಂಗಪಡಿಸಿದಂತೆ ಆಗುತ್ತದೆ. ಈ ರೀತಿ ಪ್ರಶ್ನೆ ಮಾಡುವ ಮೂಲಕ ರಾಹುಲ್ ಅವರು ಬೇರೆ ದೇಶದ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ನಾಲ್ಕುವರೆ ವರ್ಷಗಳಿಂದ ಯಾವುದೇ ಹಗರಣ, ಭ್ರಷ್ಟಾಚಾರದ ಆರೋಪ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಸಾಕಷ್ಟು ಜನಪರ ಕಾರ್ಯಗಳನ್ನು ಜಾರಿಗೆ ತಂದಿದೆ. ಆದರೆ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ವೇಳೆ ಕೇಂದ್ರದ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ’ ಎಂದು ಟೀಕಿಸಿದರು.

ADVERTISEMENT

‘ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿ ರಕ್ಷಣಾ ಸಮಾರ್ಥ್ಯ ಸೋರಿಕೆ ಮಾಡಲು ಮುಂದಾಗಿರುವುದು ಎಷ್ಟು ಸರಿ. ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಹಗರಣ ನಡೆಯದಿದ್ದರೂ ಅಪ ಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಮುಂಬರುವ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಎಚ್ಚರಿಸಿದರು.

ಬಿಜೆಪಿ ಮುಖಂಡರಾದ ನವಿಲೆ ಅಣ್ಣಪ್ಪ, ರೇಣುಕುಮಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಾಗೇಶ್, ರಾಜೇಶ್, ಚನ್ನಕೇಶವ, ಪ್ರಸನ್ನ, ಶಿವನಂಜೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.