ADVERTISEMENT

ರಾಹುಲ್‌ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

ರೆಫೇಲ್ ಯುದ್ಧ ವಿಮಾನ ಖರೀದಿ: ಡಿಸಿ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2019, 14:00 IST
Last Updated 16 ನವೆಂಬರ್ 2019, 14:00 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಹಾಸನ: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದದ ವಿಚಾರದಲ್ಲಿ ಸುಳ್ಳು ಹೇಳುವ ಮೂಲಕ ದೇಶದ ಜನರ ಹಾದಿ ತಪ್ಪಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ರಫೇಲ್‌ ಕುರಿತು ಕಾಂಗ್ರೆಸ್‌ ನಾಯಕರು ಹಸಿ ಸುಳ್ಳುಗಳನ್ನು ಹೇಳಿದ್ದಾರೆ. ಈ ಮೂಲಕ ರಕ್ಷಣಾ ಒಪ್ಪಂದದ ಪಾರದರ್ಶಕತೆ ಕುರಿತು ಪ್ರಶ್ನೆ ಮೂಡುವಂತೆ ಮಾಡಿದ್ದಲ್ಲದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಷ್ಟ್ರೀಯ ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ದೇಶದ ವಾಯುಪಡೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ದಿಸೆಯಲ್ಲಿ ಕೇಂದ್ರ ಮಾಡಿಕೊಂಡಿದ್ದ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಭ್ರಷ್ಟಾಚಾರದಿಂದ ಕೂಡಿದೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಹಾಗಾಗಿ ಈ ಆರೋಪವನ್ನು ಅವರು ಸಾರ್ವಜನಿಕವಾಗಿ ಸಾಬೀತುಪಡಿಸಬೇಕು ಎಂದು ಸವಾಲು ಹಾಕಿದರು.

ADVERTISEMENT

ರಫೇಲ್‌ ವಿಚಾರದಲ್ಲಿ ತನಿಖೆ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡುವ ಮೂಲಕ ಕೇಂದ್ರದ ಮೋದಿ ನೇತೃತ್ವದ ಸರ್ಕಾರಕ್ಕೆ ಕ್ಲೀನ್‌ ಚೀಟ್‌ ನೀಡಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನವಿಲೆ ಅಣ್ಣಪ್ಪ, ಮುಖಂಡರಾದ ವೇಣುಕುಮಾರ್, ವಿಜಯ ವಿಕ್ರಮ್ , ಭಾಸ್ಕರ್ ರಾವ್, ಶೋಭನ ಬಾಬು, ನಾಗೇಶ್‌, ನಾರಾಯಣಗೌಡ, ವೇದಾವತಿ, ವಿಜಯಲಕ್ಷ್ಮೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.