ಬಾಗೂರು(ನುಗ್ಗೇಹಳ್ಳಿ): ಹೋಬಳಿಯ ನಾಗರನವಿಲೆ ಗ್ರಾಮದಲ್ಲಿ ಶನಿವಾರ ಸಂಜೆ ನಾಗೇಶ್ವರ ಸ್ವಾಮಿ ಕ್ಷೇತ್ರದಿಂದ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ನೆರವೇರಿತು.
ಗ್ರಾಮದ ಮಹಿಳೆಯರ ಪೂರ್ಣ ಕುಂಭ ಸ್ವಾಗತದೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. 1996ರಲ್ಲಿ ಅಡ್ಡ ಪಲ್ಲಕ್ಕಿ ಉತ್ಸವದ 29 ವರ್ಷಗಳ ಬಳಿಕ ಅಡ್ಡ ಪಲ್ಲಕ್ಕಿ ಉತ್ಸವ ನಡೆದಿರುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡರು.
ಶನಿವಾರ ಸಂಜೆ ದೇವಾಲಯದ ಮುಂದೆ ಗ್ರಾಮದ ಮಹಿಳೆಯರು ಪೂರ್ಣ ಕುಂಭ ಸ್ವಾಗತದೊಂದಿಗೆ ರಂಭಾಪುರಿ ಶ್ರೀಗಳನ್ನು ಬರಮಾಡಿಕೊಳ್ಳಲಾಯಿತು. ಶ್ರೀಗಳು ಶ್ರೀ ನಾಗೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು ಅಡ್ಡ ಪಲ್ಲಕ್ಕಿಯಲ್ಲಿ ಭಕ್ತರು ಶ್ರೀಗಳ ಪ್ರತಿಷ್ಠಾಪನೆಯ ನಂತರ ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ವೀರಗಾಸೆ ಕುಣಿತ ಹಾಗೂ ಡೊಳ್ಳು ಕುಣಿತದೊಂದಿಗೆ ಗ್ರಾಮದ ರಾಜಬೀದಿಗಳಲ್ಲಿ ಭಕ್ತಿ ಭಾವದಿಂದ ನೆರವೇರಿತು. ಶಾಸಕ ಸಿ.ಎನ್. ಬಾಲಕೃಷ್ಣರವರು ಉತ್ಸವದಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದರು.
ಉತ್ಸವದಲ್ಲಿ ರಂಭಾಪುರಿ ದೊಡ್ಡಗುಣಿ ಶಾಖ ಮಠದ ರೇವಣ್ಣ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಯಡಿಯೂರು ಶಾಖ ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ನವಿಲೆ ಪರಮೇಶ್, ಶಿವಾನುಗ್ರಹ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಸಿದ್ದೇಶ್ ಶಾಸ್ತ್ರಿ, ನವಿಲೆ ಕೃಷಿ ಪತ್ತಿನ ಅಧ್ಯಕ್ಷ ಎನ್ ಎನ್ ಎನ್ ಕುಮಾರಸ್ವಾಮಿ, ನಾಗೇಶ್ವರ ಸ್ವಾಮಿ ಕಲ್ಯಾಣ ಮಂಟಪ ಅಧ್ಯಕ್ಷ ಎನ್‌ಕೆ ನಾಗಪ್ಪ, ರಥ ನಿರ್ಮಾಣ ಸಮಿತಿ ಅಧ್ಯಕ್ಷ ಸದಾಶಿವಯ್ಯ, ಶಿವಾನುಗ್ರಹ ಸೇವಾ ಪ್ರತಿಷ್ಠಾನ ಸದಸ್ಯರು, ಭಕ್ತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.