ADVERTISEMENT

ಬೆಳೆ ನಷ್ಟಕ್ಕೆ ಶೀಘ್ರ ಪರಿಹಾರ ಬಿಡುಗಡೆ

ಜವೇನಹಳ್ಳಿ ಮಠಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಭೇಟಿ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 14:53 IST
Last Updated 15 ನವೆಂಬರ್ 2020, 14:53 IST
ಹಾಸನದ ಜವೇನಹಳ್ಳಿ ಮಠದ ಸಂಗಮೇಶ್ವರ ಸ್ವಾಮೀಜಿ ಅವರನ್ನು ಕೃಷಿ ಸಚಿವ ಬಿ.ಸಿ. ಪಾಟೀಲ್ ಸನ್ಮಾನಿಸಿದರು.
ಹಾಸನದ ಜವೇನಹಳ್ಳಿ ಮಠದ ಸಂಗಮೇಶ್ವರ ಸ್ವಾಮೀಜಿ ಅವರನ್ನು ಕೃಷಿ ಸಚಿವ ಬಿ.ಸಿ. ಪಾಟೀಲ್ ಸನ್ಮಾನಿಸಿದರು.   

ಹಾಸನ: ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟದ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದು, ರಾಜ್ಯಗಳ ನೈಸರ್ಗಿಕ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್ ಎಫ್‌) ಅನ್ವಯ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.

ನಗರದ ಜವೇನಹಳ್ಳಿ ಮಠದ ಮಠಾಧೀಶ ಸಂಗಮೇಶ್ವರ ಸ್ವಾಮೀಜಿ ಅವರನ್ನು ಭಾನುವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು

‘ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಬೆಳೆ ಹಾನಿಗೀಡಾಗಿದೆ. ಜಮೀನುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಕೃಷಿ ಕ್ಷೇತ್ರದಲ್ಲಿ ಬದಲಾವಣೆ ತರಲು ಪ್ರಯತ್ನಿಸುತ್ತಿದ್ದೇನೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗಬೇಕು ಹಾಗೂ ರೈತರು ಉತ್ತಮ ಜೀವನ ನಡೆಸುವಂತಾಗಬೇಕು. ಯುವಕರು ಕೃಷಿಯತ್ತ ಆಸಕ್ತಿ ಹೊಂದಬೇಕು. ಕೃಷಿಯ ಜೊತೆಯಲ್ಲಿ ಇತರೆ ಉಪ ಕಸುಬುಗಳಾದ ಹೈನುಗಾರಿಕೆ, ಕುರಿ, ಕೋಳಿ, ಮೀನು ಸಾಕಾಣಿಕೆ ಮಾಡುವುದರಿಂದ ನಷ್ಟ ಉಂಟಾಗುವುದಿಲ್ಲ’ಎಂದು ಸಲಹೆ ನೀಡಿದರು.

ADVERTISEMENT

ರಾಜ್ಯದಲ್ಲಿ ಕೃಷಿಕರಿಗೆ ಸಾಕಷ್ಟು ಸವಲತ್ತು ನೀಡಲು ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೃಷಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಇದರ ಸದುಪಯೋಗ ಪಡೆಯಬೇಕು ಎಂದು ಕೋರಿದರು.

ಇದೇ ವೇಳೆ ಜವೇನಹಳ್ಳಿ ಮಠದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುವಂತೆ ರೈತರು ಸಚಿವರಿಗೆ ಮನವಿ ಮಾಡಿದರು. ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಮತ್ತು ಯುವ ವೇದಿಕೆ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.

ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಬಿಜೆಪಿ ಮುಖಂಡರಾದ ಎಚ್.ಎನ್. ನಾಗೇಶ್, ಶೋಬನ್ ಬಾಬು, ಯುವ ವೇದಿಕೆಯ ಅವಿನಾಶ್, ದರ್ಶನ್, ಶೋಭಾ, ಮಹೇಶ್, ಅಮೃತ, ಆರಾಧ್ಯ, ಬ್ಯಾಂಕ್ ಪರಮೇಶ್ವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.