ADVERTISEMENT

ಹಣದ ಬದಲು ಪಡಿತರ ನೀಡಿ: ಕುರುಬೂರು ಶಾಂತಕುಮಾರ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜುಲೈ 2023, 14:19 IST
Last Updated 18 ಜುಲೈ 2023, 14:19 IST
ಅರಸೀಕೆರೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಮುಖಂಡ ಕುರುಬೂರು ಶಾಂತಕುಮಾರ್.
ಅರಸೀಕೆರೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಮುಖಂಡ ಕುರುಬೂರು ಶಾಂತಕುಮಾರ್.   

ಅರಸೀಕೆರೆ: ‘ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಅಕ್ಕಿ ಬದಲು 5 ಕೆಜಿ ಅಕ್ಕಿ ಬದಲಿಗೆ ಕಾರ್ಡುದಾರರಿಗೆ ಹಣ ನೀಡಲು ನಿರ್ಧರಿಸಿರುವ ಕ್ರಮ ಸರಿಯಲ್. ಹಣದ ಬದಲು ಪಡಿತರ ಅಕ್ಕಿಯನ್ನೇ ನೀಡಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

‘ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಹಾಸನ ಸೇರಿದಂತೆ ರಾಜ್ಯದೆಲ್ಲೆಡೆ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಬರಗಾಲದಿಂದ ತತ್ತರಿಸಿರುವ ರೈತರು ಹಾಗೂ ಕೊಬ್ಬರಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಈ ನಿಟ್ಟಿನಲ್ಲಿ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು’ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಇತ್ತೀಚಿಗಿನ ಸಮೀಕ್ಷೆಯಂತೆ, ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ನೂರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅಸಮರ್ಪಕ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ಬತ್ತಿ ಹೋಗಿವೆ, ಬರಗಾಲ ಪೀಡಿತ ಪ್ರದೇಶಗಳನ್ನು ಗುರುತಿಸಿ ಸರ್ಕಾರ ರೈತರ ಸಂಕಷ್ಟಕ್ಕೆ ನೆರವಾಗಬೇಕು’ ಎಂದರು.

ADVERTISEMENT

‘ಹಿಂದಿನ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ರೈತರಿಗೆ ಅನುಕೂಲಕರವಾದ ಅನುದಾನವನ್ನು ಮೀಸಲಿಟ್ಟಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಕೇವಲ ₹5 ಸಾವಿರ ಕೋಟಿ ಮೀಸಲಿಟ್ಟಿದೆ. ಬಿಪಿಎಲ್ ಕುಟುಂಬಗಳಿಗೆ ಹಣ ನೀಡುವ ಬದಲು 5 ಕೆಜಿ ಅಕ್ಕಿ ಜತೆಗೆ 5 ಕೆಜಿ ಜೋಳ ಅಥವಾ ರಾಗಿ ವಿತರಿಸಬಹುದು ಈ ನಿಟ್ಟಿನಲ್ಲಿ ಸರ್ಕಾರ ಯೋಚಿಸಬೇಕು’ ಎಂದರು.

ರೈತ ಮುಖಂಡರಾದ ಸುನಿಲ್ ಕುಮಾರ್, ಆಯೂಬ್ ಖಾನ್, ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.