ADVERTISEMENT

ಅಮಾನತು ಆದೇಶ ಹಿಂಪಡೆಯಲು ಆಗ್ರಹಿಸಿ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 13:27 IST
Last Updated 19 ಡಿಸೆಂಬರ್ 2020, 13:27 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘದ ಮುಖಂಡರು ಧರಣಿ ನಡೆಸಿದರು.
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘದ ಮುಖಂಡರು ಧರಣಿ ನಡೆಸಿದರು.   

ಹಾಸನ: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದವೇಳೆ ಗಲಾಟೆ ಮಾಡಿದ ಆರೋಪದ ಮೇರೆಗೆ ಅಮಾನತುಗೊಂಡಿರುವವರನ್ನು ಕೂಡಲೇ ಕರ್ತವ್ಯಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ನಗರದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸರ್ಕಾರಿ ನೌಕರರಂತೆ ಪರಿಗಣಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಶಾಂತಿಯುತವಾಗಿ, ಶಿಸ್ತು ಬದ್ದವಾಗಿ ಪ್ರತಿಭಟನೆ ನಡೆಸಿದ್ದಾರೆ. ಆದರೆ, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಮತ್ತು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರ ಬಗ್ಗೆ ಬಾಯಿಗೆ ಬಂದಂತೆ ಹೇಳಿಕೆ ನೀಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ರೇಣುಕಾಚಾರ್ಯ ಅವರು ಈ ರೀತಿ ಹೇಳಿಕೆ ನೀಡುವುದನ್ನು ಬಿಟ್ಟು, ಗೌರವಯುತವಾಗಿ ಮಾತನಾಡುವುದನ್ನು ಕಲಿಯಬೇಕು. ಇಲ್ಲವಾದರೆ ರಾಜ್ಯವ್ಯಾಪಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮ ಹಕ್ಕುಗಳಿಗಾಗಿ ಹೋರಾಡಲು ಅವಕಾಶವಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಾರಿಗೆ ನೌಕರರನ್ನು ಅಮಾನತು ಮಾಡುವುದು ಎಷ್ಟು ಸರಿ? ನೌಕರರನ್ನು ಮತ್ತೆ ಕರ್ತವ್ಯಕ್ಕೆ ನಿಯೋಜಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಉಪಾಧ್ಯಕ್ಷ ಅನೆಕೆರೆ ರವಿ, ಜಿಲ್ಲಾಧ್ಯಕ್ಷ ಬಾಬು, ಪ್ರಧಾನ ಕಾರ್ಯದರ್ಶಿ ಬೋರನಕೊಪ್ಪಲು ಜಯರಾಂ, ಜಿಲ್ಲಾ ಉಪಾಧ್ಯಕ್ಷ ಮೀಸೆ ಮಂಜಣ್ಣ, ಮುಖಂಡರಾದ ಶಿವರಾಮೇಗೌಡ, ಅಂಗಡಿ ರಾಜಣ್ಣ, ಮಹಮ್ಮದ್‌ ಸಾದಿಕ್‌, ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ, ಕವಿತಾ, ಗೀತಾ, ರಂಗಮ್ಮ, ಕುಮಾರ್‌, ಹರಿಹರ, ಪರಮೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.